ಚನ್ನಪಟ್ಟಣ: ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದ್ದು, ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕೋಡಂಬಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೋಡಂಬಹಳ್ಳಿ, ಎಲೆತೋಟದಹಳ್ಳಿ, ಜೆ.ಬ್ಯಾಡರಹಳ್ಳಿ ಗ್ರಾಮಗಳಲ್ಲಿ ಗುರುವಾರ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ಐದು ವರ್ಷಗಳಿಂದ ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಕ್ಷೇತ್ರದ ಜನ ಬೆಂಬಲ ನೀಡಿದ್ದಾರೆ. ಈಗ ಅವರು ಕೇಂದ್ರ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಬರಲಿರುವ ಉಪಚುನಾವಣೆಯಲ್ಲಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ. ಜೆಡಿಎಸ್ ಕೂಡಾ ಮೈತ್ರಿಕೂಟದ ಒಂದು ಭಾಗ. ಹಾಗಾಗಿ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು. ಅದಕ್ಕಾಗಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ಬಿಜೆಪಿಯ ರಾಜ್ಯನಾಯಕರು ಅವರವರ ಅಭಿಪ್ರಾಯ ತಿಳಿಸಿದ್ದಾರೆ. ಆದರೆ, ಅಂತಿಮವಾಗಿ ಬಿಜೆಪಿ ಹಾಗೂ ಜೆಡಿಎಸ್ ವರಿಷ್ಠರು ಈ ಕುರಿತು ತೀರ್ಮಾನ ಮಾಡುತ್ತಾರೆ. ಅಭ್ಯರ್ಥಿ ಯಾರೇ ಆದರೂ ಎರಡೂ ಪಕ್ಷಗಳು ಬೆಂಬಲ ಕೊಡಬೇಕು. ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಮಂತ್ರ ಜಪಿಸಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ಸಹೋದರ ಮೂರು ಬಾರಿ ಸಂಸದರಾಗಿದ್ದರು. ಈಗ ಕೇತ್ರವನ್ನು ಕಳೆದಿಕೊಂಡಿದ್ದಾರೆ. ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗೆ ಬಹುಮತ ಸಿಕ್ಕಿದೆ. ಮುಂಬರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದರು.
ಚುನಾವಣೆ ಗಮನದಲ್ಲಿಟ್ಟುಕೊಂಡು ಧ್ವಜಾರೋಹಣ: ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಬೇಕು. ಆದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂಬರುವ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ಧ್ವಜಾರೋಹಣ ನೆರವೇರಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಟೀಕಿಸಿದರು.
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ತರಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಮುಡಾ ಹಗರಣ ಮುಚ್ಚಿ ಹಾಕಲು ತಂತ್ರ ಮಾಡುತ್ತಿದ್ದಾರೆ. ಇವರ ಹೋರಾಟದಲ್ಲಿ ಯಾವುದೇ ಹುರುಳಿಲ್ಲ. ಕುಮಾರಸ್ವಾಮಿ ಅವರ ವಿಚಾರದಲ್ಲಿ ವೆಂಕಟೇಶ್ವರ ಮೈನಿಂಗ್ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ. ಆದರೆ ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಎಸ್.ಐ.ಟಿ., ಲೋಕಾಯುಕ್ತಗೆ ವರದಿ ಕೊಡುವಂತೆ ಕೋರ್ಟ್ ಸೂಚಿಸಿದ್ದರೂ ವರದಿ ಕೊಟ್ಟಿಲ್ಲ. ಈಗ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳುವುದು ಅನಗತ್ಯ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.