ಶನಿವಾರ, ಅಕ್ಟೋಬರ್ 23, 2021
20 °C

ದಲಿತ ನಾಯಕರನ್ನು ಸೋಲಿಸಿದ್ದು ಯಾರು: ಡಿಕೆಶಿಗೆ ಎಚ್‌ಡಿಕೆ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.

‘ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಡದಿಯಲ್ಲಿ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು. ‘ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಬರುತ್ತಾರೆಂದು ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಕಾರಣ ಯಾರು? ಧರ್ಮಸಿಂಗ್ ಅವರ ಸೋಲಿಗೆ ಕಾರಣ ಯಾರು? ಕೋಲಾರದಲ್ಲಿ ಕೆ.ಎಚ್. ಮುನಿಯಪ್ಪ ಅವರನ್ನು ಸೋಲಿಸಿದವರು ಯಾರು? ಬಿಜೆಪಿಗೆ ಶಕ್ತಿಯೇ ಇಲ್ಲದ ಹಾಗೂ ಕಾರ್ಪೊರೇಟರ್ ಕೂಡ ಆಗಲು ಆಗದಂತಹ ವ್ಯಕ್ತಿಯನ್ನು ಕರೆತಂದು ಕೋಲಾರದಲ್ಲಿ ನಿಲ್ಲಿಸಿ ಪ್ರತ್ಯಕ್ಷವಾಗಿ, ಬೆಂಬಲ ನೀಡಿದವರು ಯಾರು? ರಮೇಶ್ ಕುಮಾರ್ ಯಾರ ಪರ ಕೆಲಸ ಮಾಡಿದರು. ಅಲ್ಲಿನ ಬಿಜೆಪಿ ಸಂಸದರ ಆಯ್ಕೆ ಹಿಂದೆ ಯಾರಿದ್ದಾರೆ?’ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣವಲ್ಲವೇ? ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರಚಾರ ಪ್ರಿಯ ಸರ್ಕಾರ: ರಾಜ್ಯ ಸರ್ಕಾರ ಜಾಹೀರಾತುಗಳ ಮೂಲಕ ಪ್ರಚಾರ ಹಾಗೂ ಸ್ವ ಪ್ರಶಂಸೆಯಲ್ಲಿ ಮುಳುಗಿದೆ. ಮೋದಿ, ಬೊಮ್ಮಾಯಿ ಇಬ್ಬರೂ ನವ ಭಾರತಕ್ಕಾಗಿ ನವ ಕರ್ನಾಟಕವೆಂದು ಪ್ರಚಾರ ಪಡೆಯುತ್ತಿದ್ದಾರೆ. ಬೊಮ್ಮಾಯಿ ಸಹ ಮೋದಿ ಅವರಂತೆ ಡ್ರೆಸ್ ಮಾಡಿಕೊಂಡು ಫೋಟೋ ಶೂಟ್ ಮಾಡಿಸಿಕೊಂಡು ಬಸ್ ನಿಲ್ದಾಣಗಳ ಮೇಲೆ ಜಾಹೀರಾತುಗಳಲ್ಲಿ ಪೋಸು ಕೊಡುತ್ತಿದ್ದಾರೆ. ಇವರು ಏನು ಮಾಡಲು ಹೊರಟಿದ್ದಾರೆ? ನವ ಕರ್ನಾಟಕ ಏನು ಅನ್ನೋದು ನನಗೇ ಇನ್ನೂ ಅರ್ಥವಾಗಿಲ್ಲ. ಇವರಾದರೂ ನಮಗೆ ಹೇಳಲಿ ಎಂದು ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು