ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದುಡಿಮೆಯ ಸ್ವಲ್ಪ ಭಾಗ ಸಮಾಜದ ಪ್ರಗತಿಗೆ ಮೀಸಲಿಡಿ’

ಜಾಲಿ ಫೆಲೋಸ್ ಕ್ಲಬ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ
Last Updated 23 ಜೂನ್ 2019, 15:57 IST
ಅಕ್ಷರ ಗಾತ್ರ

ರಾಮನಗರ: ಪ್ರತಿಯೊಬ್ಬ ವ್ಯಕ್ತಿಯೂ ದುಡಿದಿದ್ದರಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಪ್ರಗತಿಗಾಗಿ ಮೀಸಲಿಡಬೇಕು ಎಂದು ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರನಾಥ ಸ್ವಾಮೀಜಿ ಹೇಳಿದರು.

ಇಲ್ಲಿನ ಬಿಜಿಎಸ್ ಅಂಧರ ಶಾಲೆಯಲ್ಲಿ ಚನ್ನಪಟ್ಟಣದ ಜಾಲಿ ಫೆಲೋಸ್ ಕ್ಲಬ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಳ್ಳವರು ಕೂಡಿಟ್ಟ ಸಂಪತ್ತನ್ನು ದಾನ ಮಾಡಬೇಕು. ಮಾಡದಿದ್ದರೆ ಕಳ್ಳರ ಪಾಲಾಗುತ್ತದೆ. ಹಾಗಾಗಿ ದಾನದ ಮೂಲಕ ಸಮಾಜದ ಅಭಿವೃದ್ಧಿಗೆ ನೆರವಾಗಬೇಕು. ಆ ನಿಟ್ಟಿನಲ್ಲಿ ಜಾಲಿ ಫೆಲೋಸ್ ಕ್ಲಬ್ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ವಿಜ್ಞಾನಿಗಳು ಸಹ ತಪಸ್ವಿಗಳಾಗುತ್ತಾರೆ. ಸಾಧನೆಯೂ ಒಂದು ರೀತಿಯ ತಪ್ಪಸ್ಸಾಗಿದೆ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶೇಷ ಶಕ್ತಿ ಇರುತ್ತದೆ. ಅದನ್ನು ಗುರುತಿಸಿಕೊಂಡು ಸಾಧನೆಯ ಮೆಟ್ಟಿಲನ್ನು ಏರಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತರನ್ನು ಸನ್ಮಾನಿಸುವುದು ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಹಿರಿಯ ರೈತ ಮುಖಂಡ ಸಿ. ಪುಟ್ಟಸ್ವಾಮಿ ಮಾತನಾಡಿ ಸಮಾನ ಮನಸ್ಕ ಸರ್ಕಾರಿ ನೌಕರರು ಸೇರಿಕೊಂಡು ರಚಿಸಿಕೊಂಡ ಜಾಲಿ ಫೆಲೋಸ್ ಕ್ಲಬ್ ಪ್ರತಿಭಾವಂತರಿಗೆ ಸನ್ಮಾನ ಮಾಡುತ್ತಿರುವುದು ಖುಷಿಯ ಸಂಗತಿ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಸಾವಿರಾರು ರೂಪಾಯಿ ಖರ್ಚು ಮಾಡುತ್ತೆವೆ. ಅಂತೆಯೇ ಸಾಮಾಜಿಕ ಕಾರ್ಯಕ್ಕಾಗಿ ನಮ್ಮ ಶ್ರಮದ ಕೆಲ ಭಾಗವನ್ನಾದರೂ ವಿನಿಯೋಗಿಸುವುದರಿಂದ ಅರ್ಹರಿಗೆ ನೆರವಾಗುತ್ತದೆ. ಇದು ಇನ್ನೊಬ್ಬರಿಗೆ ಪ್ರೇರಣೆ ನೀಡುತ್ತದೆ ಎಂದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸು.ತ. ರಾಮೇಗೌಡ ಮಾತನಾಡಿ ಅಂಧ ಮಕ್ಕಳಲ್ಲಿಯೂ ಪ್ರತಿಭೆಯಿದೆ. ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಶು ವೈದ್ಯಕೀಯ ಕ್ಷೇತ್ರದಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕ್ಲಬ್‌ನ ಪ್ರಮುಖರಾದ ರಾಮಚಂದ್ರ, ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT