ರಾಮನಗರ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದರಿಂದ, ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ವೃತ್ತದಲ್ಲಿ ಜಮಾಯಿಸಿ ಕೆಲ ಹೊತ್ತು ರಸ್ತೆ ತಡೆದ ಕಾರ್ಯಕರ್ತರು, ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಹೈಕೋರ್ಟ್ ಕೂಡ ಹಸಿರು ನಿಶಾನೆ ತೋರಿದೆ. ಇದರೊಂದಿಗೆ, ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿರುವುದು ನಿಚ್ಚಳವಾಗಿದೆ’ ಎಂದರು.
‘ಮುಖ್ಯಮಂತ್ರಿ ಹುದ್ದೆಯಲ್ಲಿದ್ದವರು ತಮ್ಮ ವಿರುದ್ಧ ಗುರುತರ ಆರೋಪಗಳು ಕೇಳಿಬಂದಾಗ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಆ ಹುದ್ದೆಗೆ ಘನತೆ ತಂದಿದ್ದಾರೆ. ಹಿಂದೆ ಟೆಲಿಫೋನ್ ಕದ್ದಾಲಿಕೆ ಆರೋಪ ಬಂದಾಗ ರಾಮಕೃಷ್ಣ ಹೆಗಡೆ ರಾಜೀನಾಮೆ ಕೊಟ್ಟಿದ್ದರು. ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ಮಾದರಿ ನಡೆ ಅನುಸರಿಸಬೇಕು’ ಎಂದು ಒತ್ತಾಯಿಸಿದರು.
ಮೈತ್ರಿ ಪಕ್ಷಗಳ ಮುಖಂಡರಾದ ರುದ್ರದೇವರು, ಎಸ್.ಆರ್.ನಾಗರಾಜು, ಕಾಳಪ್ಪ, ಹಾರೋಹಳ್ಳಿ ಚಂದ್ರು, ಕಾಳಯ್ಯ, ಜಯಕುಮಾರ್, ಕೆಂಪರಾಜು ಹಾಗೂ ಇತರರು ಇದ್ದರು.