ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಉತ್ಪನ್ನ ನೇರ ಖರೀದಿಗೆ ಸೂಚಿಸಿದ ಎಚ್‌.ಡಿ ಕುಮಾರಸ್ವಾಮಿ

ಲಾಕ್‌ಡೌನ್‌ ಪರಿಸ್ಥಿತಿ ನಿರ್ವಹಣೆ; ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ: ಎಚ್‌.ಡಿ. ಕುಮಾರಸ್ವಾಮಿ ಸಲಹೆ
Last Updated 31 ಮಾರ್ಚ್ 2020, 15:05 IST
ಅಕ್ಷರ ಗಾತ್ರ

ರಾಮನಗರ: ರೈತರ ಜಮೀನುಗಳಿಗೇ ತೆರಳಿ ಕೃಷಿ ಉತ್ಪನ್ನ ಖರೀದಿಸುವಂತೆ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಸಲಹೆ ನೀಡಿದ್ದೇನೆ. ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದು ಶಾಸಕ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೊರೊನಾ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಜನ ಪ್ರತಿನಿಧಿ ಹಾಗೂ ಅಧಿಕಾರಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

ಚಿಂಚೋಳಿಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಉತ್ಪನ್ನ ಕೊಳ್ಳುವವರಿಲ್ಲದೇ ಹೊಲದಲ್ಲೇ ಹಾಳಾಗುತ್ತಿದೆ. ಜಿಲ್ಲೆಯಲ್ಲಿನ ಮಾವು ಹಾಗೂ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ತೊಂದರೆ ಆಗಿದೆ. ತೋಟಗಾರಿಕೆಯ ಬೆಳೆಗಾರರಿಗೆ ಅನುಕೂಲ ಕಲ್ಪಿಸಿಕೊಡಲು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಎಪಿಎಂಸಿಯಿಂದಲೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದು ಹೇಳಿದ ಅವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಸಿಲಕಿದ್ದಾರೆ. ಅವರಿಗೆ ಬೇಕಾದ ನೆರವು ಒದಗಿಸುವ ಕುರಿತು ಚರ್ಚೆ ನಡೆಸಲಾಗಿದೆ. ಕೆಲವರಿಗೆ ರೇಷನ್‌ ಕಾರ್ಡ್‌ ಸಹ ಇಲ್ಲ. ಇಂತಹವರಿಗೆ ಕೆಲವು ಸಂಘಟನೆಗಳು ನೆರವು ನೀಡಲು ಮುಂದೆ ಬಂದಿವೆ. ನಾವೂ ಕೈಲಾದ ಸಹಾಯ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 234 ಜನರನ್ನು ಹೋಂ ಕ್ವಾ‌ರಂಟೈನ್‌ನಲ್ಲಿ ಮಾಡಲಾಗಿದೆ. ನಾಲ್ಕು ದಿನಗಳ ಹಿಂದೆ ಜಿಲ್ಲೆಗೆ ಆರೋಗ್ಯ ಸಚಿವರ ಶ್ರೀರಾಮುಲು ಇಲ್ಲಿ ಸಭೆ ಮಾಡಿದ್ದರು. ಆಗಾಗ್ಗೆ ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವೈದ್ಯರ ಕೊರತೆಯಿಲ್ಲ: ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂಬ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಓದಿದ್ದೇನೆ. ಆಸ್ಪತ್ರೆಯಲ್ಲಿ ಮೂರು ಪಾಳಿಯಲ್ಲಿ ಎಂಟು ಮಂದಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು ಒಟ್ಟು 24 ಮಂದಿ ಇದ್ದಾರೆ. ಇನ್ನು ನಾಲ್ಕು ಮಂದಿ ವೈದ್ಯರ ಕೊರತೆ ಇದೆ, ಇಂತಹದ್ದೇ ಪರಿಸ್ಥಿತಿ ರಾಜ್ಯದಲ್ಲೂ ಇದೆ. ಆದರೂ ಇಲ್ಲೆಯಲ್ಲಿ ಯಾವುದೇ ಸಮಸ್ಯೆ ಬಾಧಿಸುತ್ತಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್‌, ಶಾಸಕರಾದ ಅನಿತಾ ಕುಮಾರಸ್ವಾಮಿ, ಎ.ಮಂಜುನಾಥ್‌, ಜಿಲ್ಲಾಧಿಕಾರಿ ಅರ್ಚನಾ, ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನೂಪ್‌ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT