ಬುಧವಾರ, ನವೆಂಬರ್ 13, 2019
18 °C

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಅವರಿಂದ ಪ್ರಗತಿ ಪರಿಶೀಲನಾ ಸಭೆ‘

Published:
Updated:
Prajavani

ರಾಮನಗರ: ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿರುವ ಜಿಲ್ಲೆಯು ಈ ಬಾರಿ ಬಾರಿ ಪ್ರಥಮ ಸ್ಥಾನ ಹೊಂದಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಜಿಲ್ಲೆಗೆ ಎರಡನೇ ಸ್ಥಾನ ದೊರತಿರುವುದು ಅಭಿನಂದನೀಯ. ಈ ಬಾರಿ ಫಲಿತಾಂಶ ಮತ್ತಷ್ಟು ಸುಧಾರಣೆ ಕಾಣಬೇಕು ಎಂದು ಆಶಿಸಿದರು.

ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಬೆಳೆ ಸಮೀಕ್ಷೆ ಕಾರ್ಯ ಶೇ 95ರಷ್ಟು ಪ್ರಗತಿ ಕಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಮಳೆ ಪ್ರವಾಹದಿಂದ ನಷ್ಟ ಅನುಭವಿಸಿದ ರೈತರು, ಬೆಳೆನಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ರೈತ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಒತ್ತುವರಿಯಾದ ಸರ್ಕಾರಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ವೃದ್ಧಾಪ್ಯ ವೇತನ, ವಿಧವಾ ಯೋಜನೆ, ವಿಕಲಚೇತನರ ಯೋಜನೆ ಮತ್ತಿತರ ಯೋಜನೆಗಳಿಗೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಪಿಂಚಣಿ ಸರಿಯಾದ ಸಮಯಕ್ಕೆ ಪಿಂಚಣಿದಾರರಿಗೆ ತಲುಪಲು ಬೇಕಾದ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಬ್ಯಾನ್ ಮಾಡಿರುವ ಜಿಲ್ಲಾಡಳಿತದ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದ ಅವರು ಪ್ಲಾಸ್ಟಿಕ್ ತ್ಯಾಜ್ಯವನ್ನು ರಸ್ತೆ ಢಾಂಬರೀಕರಣಕ್ಕೆ ಬಳಸಿಕೊಳ್ಳುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವ ಸ್ವಾಮಿ, ಉಪಕಾರ್ಯದರ್ಶಿ ಉಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)