ರಾಮನಗರ : ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ನೀಡಿದ್ದ ಕರೆಗೆ ಓಗ್ಗೊಟ್ಟು ರಾಮನಗರ ವೈದ್ಯರು ಮುಷ್ಕರಕ್ಕೆ ಬೆಂಬಲಿಸಿದ ಪರಿಣಾಮ ಜಿಲ್ಲೆಯಲ್ಲಿ ರೋಗಿಗಳು ಪರದಾಡುವಂತಾಯಿತು.
ನಗರದ ಖಾಸಗಿ ಕ್ಲಿನಿಕ್‌ಗಳು, ನಸಿಂಗ್ ಹೋಂಗಳು ಬಾಗಿಲು ಮುಚ್ಚಿದ್ದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಿ, ತುರ್ತು ಚಿಕಿತ್ಸೆ ಮಾತ್ರ ನೀಡಲಾಯಿತು. ತುರ್ತು ಘಟಕದಲ್ಲಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು.
ಭಾರತೀಯ ವೈದ್ಯಕೀಯ ಸಂಘ ಶನಿವಾರ ಬೆಳಗ್ಗೆ 6ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂಗ್‌ಗೆ ದೇಶಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಕಡೆ ಹೊರ ರೋಗಿಗಳಿಗೆ ಚಿಕಿತ್ಸೆ ಲಭಿಸದೆ ಅನಾನುಕೂಲ ಉಂಟಾಯಿತು. ಅದರಲ್ಲೂ ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಮಕ್ಕಳಿಗೆ ತೊಂದರೆಯಾಯಿತು. ವೈದ್ಯರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ರೋಗಿಗಳು ಆಸ್ಪತ್ರೆಗೆ ಬಂದು, ಚಿಕಿತ್ಸೆ ಲಭಿಸದ ಕಾರಣ ವಾಪಸ್ಸಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಜಿಲ್ಲೆಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಮುಷ್ಕರದ ಕಾರಣ ಆಸ್ಪತ್ರೆಯ ಸೇವೆಯನ್ನು ಸ್ಥಗಿತ ಮಾಡಿರುವ ಕುರಿತು ಆಸ್ಪತ್ರೆಯ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿತ್ತು.
ಜಿಲ್ಲಾಸ್ಪತ್ರೆ: ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರು. ಹೊರ ರೋಗಿಗಳ ಸೇವೆಯನ್ನು ಬಂದ್ ಮಾಡಲಾಗಿತ್ತು. ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು. ಇನ್ನು ಜಿಲ್ಲಾಸ್ಪತ್ರೆಯ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಸೇವೆ ನೀಡಿದರು.
ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಮಾತ್ರ ನೀಡಲಾಗುತ್ತಿದೆ. ಅನ್ಯಾಯದ ವಿರುದ್ಧ ಪ್ರತಿಭಟಿಸಬೇಕು. ಆದರೆ, ವೈದ್ಯರಾಗಿ ರೋಗಗಳ ಪ್ರಾಣವನ್ನೂ ಲೆಕ್ಕಿಸಬೇಕು. ಹೀಗಾಗಿ, ವೈದ್ಯರು ಆಸ್ಪತ್ರೆಯಲ್ಲಿದ್ದು, ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳನ್ನು ನೋಡುತ್ತಿದ್ದಾರೆ. ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಡಾ.ಮಂಜುನಾಥ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.