ಗುರುವಾರ , ಮಾರ್ಚ್ 4, 2021
17 °C

‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಮನುಷ್ಯ ಆರೋಗ್ಯವಂತವಾಗಿರಲು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಬಟ್ಟೆ ಬ್ಯಾಗ್ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ ಕಂಪನಿಯ ಸಹಯೋಗದಲ್ಲಿ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ಮುಕ್ತ ಸಮಾಜಕ್ಕಾಗಿ ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ತರಕಾರಿ ತರಲು ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಇಂದು ಪ್ಲಾಸ್ಟಿಕ್ ಹೆಚ್ಚಾಗಿ ಬಳಸುತ್ತಿರುವುದರಿಂದ ಮನುಷ್ಯನಿಗೆ ಅನೇಕ ಕಾಯಿಲೆಗಳು ಬರುತ್ತಿವೆ. ಪ್ಲಾಸ್ಟಿಕ್ ಕೊಳೆಯುವ ವಸ್ತುವಲ್ಲ, ಅದನ್ನು ಸುಡುವುದರಿಂದ ವಾತಾವರಣ ಕಲುಷಿತವಾಗಿ ಓಝೋನ್ ಪದರ ಹಾಳಾಗುತ್ತಿದೆ. ಕೆಲವೆಡೆ ಓಝೋನ್ ಹಾಳಾದ ಪರಿಣಾಮ ಚರ್ಮರೋಗಗಳು ಸೃಷ್ಟಿಯಾಗಿವೆ. ಓಜೋನ್ ಪದರವನ್ನು ರಕ್ಷಿಸುವ ಜವಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಅದಕ್ಕಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ಲಾಸ್ಟಿಕ್ ಬಳಕೆಯಿಂದ ವಾತಾವರಣದಲ್ಲಿ ಏರುಪೇರಿನಿಂದ ಮಳೆಯ ಕೊರತೆ ಉಂಟಾಗಿದೆ. ಸರಿಯಾದ ಸಂದರ್ಭದಲ್ಲಿ ಮಳೆ ಬರುತ್ತಿಲ್ಲ, ಕುಡಿಯುವ ನೀರಿಗೆ ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಿಗೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ಮನವರಿಕೆ ಮಾಡಿ ಎಂದು ಹೇಳಿದರು.

ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ವೆಂಕಟಪ್ಪ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಕೆ. ಮಾಯಣ್ಣ ಗೌಡ, ಪರಿಸರ ಅಧಿಕಾರಿ ಸಿ. ಸಿದ್ದರಾಮಯ್ಯ, ನಗರಸಭೆ ಆಯುಕ್ತೆ ಬಿ. ಶುಭಾ, ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಅಧಿಕಾರಿಗಳಾದ ಅರವಿಂದ್ ಕುಮಾರ್ ಸಿಂಗ್, ಬಿ.ಎಸ್. ನಾಗರಾಜ್ ಇದ್ದರು.

ಶಾಲಾ ವಿದ್ಯಾರ್ಥಿಗಳು ಹಾಗೂ ಪೌರ ಕಾರ್ಮಿಕರು ನಗರದ ವಿವಿಧ ಪ್ರದೇಶಗಳಲ್ಲಿ ಜಾಥಾ ನಡೆಸುವ ಮೂಲಕ ಪ್ಲಾಸ್ಟಿಕ್ ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು