ಗುರುವಾರ , ನವೆಂಬರ್ 14, 2019
19 °C

ಸಂಘಟನೆಗಳಿಂದ ಡಿಸಿಎಂಗೆ ಮನವಿ

Published:
Updated:
Prajavani

ರಾಮನಗರ: ಉಪ ಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್ ಅವರಿಗೆ ಸೋಮವಾರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಆರ್‌ಎಸ್‌ಇಪಿ ಒಪ್ಪಂದಕ್ಕೆ ಸಹಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಲಕ್ಷ್ಮಣಸ್ವಾಮಿ ನೇತೃತ್ವದಲ್ಲಿ ಸಚಿವರಿಗೆ ಮನವಿ ಪತ್ರ ನೀಡಿದರು.

‘ಏಷ್ಯಾದ 16 ದೇಶಗಳ ನಡುವೆ ಆರ್‌ಎಸ್‌ಇಪಿ ಒಪ್ಪಂದಕ್ಕೆ ಸಹಿ ಮಾಡಿ ಆಮದು ಮತ್ತು ರಫ್ತಿಗೆ ಮುಕ್ತ ಅವಕಾಶ ಮಾಡಿಕೊಟ್ಟಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಹೊಡೆತ ಬೀಳಲಿದೆ. ಕೃಷಿ, ತೋಟಗಾರಿಕೆ ಹಾಗೂ ಹಾಲು ಉತ್ಪನ್ನಗಳ ಕ್ಷೇತ್ರಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. ಇದರಿಂದ ರೈತರು ಸಂಕಷ್ಟಕ್ಕೆ ಬೀಳುತ್ತಾರೆ. ಹೀಗಾಗಿ ಕೇಂದ್ರ ಸರ್ಕಾರವು ಈ ಒಪ್ಪಂದಕ್ಕೆ ಸಹಿ ಮಾಡಬಾರದು’ ಎಂದು ಆಗ್ರಹಿಸಿದರು.

ರೇಷ್ಮೆ ಬೆಳೆಗಾರರ ಹಿತ ಕಾಯಬೇಕು. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಎಪಿಎಂಸಿಗಳಲ್ಲಿ ಕಮಿಷನ್‌ ದಂಧೆ ನಿಯಂತ್ರಿಸಬೇಕು. ಬೆಳೆ ನಷ್ಟಕ್ಕೆ ವೈಜ್ಞಾನಿಕವಾಗಿ ಪರಿಹಾರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ಜಯ ಕರ್ನಾಟಕ ಸಂಘಟನೆ: ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಜಿಲ್ಲೆ ರೇಷ್ಮೆ ಬೆಳೆಗೆ ಪ್ರಸಿದ್ಧಿ ಪಡೆದಿದೆ. ಇಲ್ಲಿನ ಬೆಳೆಗಾರರ ಹಿತ ಕಾಯುವ ಜೊತೆಗೆ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು. ಜಿಲ್ಲೆಯ ಅಭಿವೃದ್ಧಿಗೆ ಹಮ್ಮಿಕೊಂಡಿದ್ದ ಹತ್ತಾರು ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿದೆ. ಅಲ್ಲದೆ, ಪ್ರಮುಖ ಉದ್ಯಮಗಳು, ಕಾಲೇಜು, ಸ್ಥಳಾಂತರ ಮಾಡಲಾಗುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರದ ಅವಯಲ್ಲೇ ಘೋಷಿಸಲಾಗಿದ್ದ ರಾಜೀವ್ ಗಾಂ ಆರೋಗ್ಯ ವಿವಿ ಇನ್ನು ನೆನೆಗುದಿಗೆ ಬಿದ್ದಿದೆ. ಹತ್ತಾರು ಅಭಿವೃದ್ಧಿ ಕಾರ್ಯಗಳು ಇನ್ನು ಚಾಲನೆ ನೀಡುವ ಹಂತದಲ್ಲೇ ಇದ್ದು, ಈ ಕುರಿತು ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹಾಗೂ ಪದಾಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)