ಶುಕ್ರವಾರ, ಅಕ್ಟೋಬರ್ 29, 2021
20 °C

ಮಾಗಡಿ: ಜನಜಾಗೃತಿ ವೇದಿಕೆ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ‘ಕುಡಿತದ ದುಷ್ಪರಿಣಾಮಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿಕೊಡುವ ಉದ್ದೇಶದಿಂದ ಮದ್ಯಪಾನ ಮುಕ್ತ ಗ್ರಾಮ ಕಲ್ಪನೆಯ ಬಗ್ಗೆ ಪ್ರತಿಯೊಂದು ಹಳ್ಳಿಯಲ್ಲೂ ಜನಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಚಿಕ್ಕಣ್ಣಯ್ಯ
ತಿಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್‌ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಶಾಖೆಯಿಂದ ಶುಕ್ರವಾರ ಶ್ರೀಪತಿಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ನಡೆದ ಜನಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮಹಾತ್ಮ ಗಾಂಧೀಜಿಯ ಕನಸನ್ನು ನನಸು ಮಾಡಲು ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಮದ್ಯಪಾನ ಮುಕ್ತ ಕರ್ನಾಟಕ ನಿರ್ಮಿಸಲು ಅಹರ್ನಿಶಿ ದುಡಿಯಬೇಕಿದೆ ಎಂದು ಸಲಹೆ ನೀಡಿದರು.

ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಬೇಕು. ಅದಕ್ಕಾಗಿ ಗ್ರಾಮ ಮಟ್ಟದಲ್ಲಿ ಇಂತಹ ಮಾಹಿತಿಯ ವಿಚಾರ ವಿನಿಮಯ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ ಎಂದರು.

ಮೈಸೂರಿನ ಜನಜಾಗೃತಿ ಕಾರ್ಯಕ್ರಮದ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಭಾಸ್ಕರ್‌ ಎನ್. ಮಾತನಾಡಿ, ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಧರ್ಮಸ್ಧಳ ಸಂಸ್ಧೆಯು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದೆ. ಸಾವಿರಾರು ಕುಟುಂಬದ ಸದಸ್ಯರು ಕುಡಿತ ತ್ಯಜಿಸಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಗಾಂಧೀಜಿ ಮದ್ಯಪಾನ ಮುಕ್ತ ಗ್ರಾಮವೇ ರಾಮರಾಜ್ಯ ಎಂದಿದ್ದರು. ಪ್ರತಿಯೊಂದು ಹಳ್ಳಿಗಳಲ್ಲೂ ಪೆಟ್ಟಿಗೆ ಅಂಗಡಿಗಳಲ್ಲಿ ಅನಧಿಕೃತವಾಗಿ ಮದ್ಯಪಾನ ಮಾರುವುದನ್ನು ನಿಲ್ಲಿಸಲು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಮದ್ಯಪಾನ ಮಾಡುವುದರಿಂದ ಕುಟುಂಬಗಳಲ್ಲಿ ನೆಮ್ಮದಿ ನಾಶವಾಗಲಿದೆ. ಗೃಹಿಣಿಯರು ಇನ್ನಿಲ್ಲದ ಸಂಕಟಕ್ಕೆ ಸಿಲುಕಿ ಸಂಸಾರ ಬೀದಿ ಪಾಲಾಗಲಿದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ಅನಿತಾ ಸಂಗಮೇಶ್‌ ಅಧ್ಯಕ್ಷತೆವಹಿಸಿದ್ದರು. ತಾಲ್ಲೂಕು ಯೋಜನಾಧಿಕಾರಿ ಎ. ಗೋಪಾಲಕೃಷ್ಣ, ಮುಖ್ಯಶಿಕ್ಷಕಿ ಪ್ರತಿಮಾ, ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳು, ವಲಯ ಸೇವಾ ಪ್ರತಿನಿಧಿಗಳು, ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಧಿತರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು