ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್: ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯ ಸಚಿವ ಸಂಪುಟದ ಒಪ್ಪಿಗೆ: ಒಟ್ಟು 155 ಕೋಟಿ ವೆಚ್ಚ
Last Updated 8 ಜನವರಿ 2021, 12:58 IST
ಅಕ್ಷರ ಗಾತ್ರ

ರಾಮನಗರ: ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್‌ ಮಾದರಿ ಕಂಪ್ಯೂಟರ್‌ಗಳನ್ನು ವಿತರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರಕಟಿಸಿದರು.

ಬಮುಲ್‌ ವತಿಯಿಂದ ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿನ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ₨155.4 ಕೋಟಿ ವ್ಯಯಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಸರ್ಕಾರ ಪ್ರತಿ ಒಂದು ಟ್ಯಾಬ್ಲೆಟ್‌ ಅನ್ನು ₨10 ಸಾವಿರ ಬೆಲೆಯಂತೆ ಖರೀದಿ ಮಾಡುತ್ತಿದೆ. ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ 115 ಕೋಟಿ, ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ 28.91 ಕೋಟಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ 11.49 ಕೋಟಿ ವ್ಯಯಿಸಲಾಗುವುದು. ಇದಕ್ಕೆ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದರು.

ಡಿಜಿಟಲ್‌ ಯುಗದಲ್ಲಿ ಖಾಸಗಿ–ಸರ್ಕಾರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ನಡುವೆ ಅಂತರ ಇದ್ದು, ಇದನ್ನು ಅಳಿಸಿ ಹಾಕುವ ಸಲುವಾಗಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚು ಅನುಕೂಲ ಆಗಲಿದೆ ಎಂದರು. ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಈ ಟ್ಯಾಬ್ಲೆಟ್‌ಗಳು ಗುಣಮಟ್ಟದಿಂದ ಕೂಡಿದ್ದು, ಕಲಿಕೆಗೆ ಬೇಕಾದ ಎಲ್ಲ ಫೀಚರ್‌ಗಳನ್ನು ಹೊಂದಿರಲಿವೆ. ವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಸಾಧಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದು ವಿವರಿಸಿದರು.

ವಾರದಲ್ಲಿ ಕೋವಿಡ್ ಲಸಿಕೆ ಲಭ್ಯ

ರಾಜ್ಯದಲ್ಲಿ ವಾರದೊಳಗೆ ಕೋವಿಡ್ ಲಸಿಕೆ ಲಭ್ಯ ಆಗಲಿದ್ದು, ಮೊದಲ ಹಂತದಲ್ಲಿ ಆರೋಗ್ಯ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು.

ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್‌ ಲಸಿಕೆ ಪೂರ್ವ ತಾಲೀಮು ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಲಸಿಕೆಯು ಈಗಾಗಲೇ ಪ್ಯಾಕಿಂಗ್‌ ಆಗಿ ಆಯಾ ರಾಜ್ಯಗಳಿಗೆ ಬರುತ್ತಿದೆ. ಇದಕ್ಕಾಗಿ ಸರ್ಕಾರ ‘ಡ್ರೈ ರನ್‌’ ಮೂಲಕ ಅಗತ್ಯ ಸಿದ್ಧತೆ ನಡೆಸಿದೆ. ಒಬ್ಬ ವ್ಯಕ್ತಿಗೆ ಮೊದಲ ದಿನದಂದು ಒಂದು ಲಸಿಕೆ ಹಾಗೂ 28 ದಿನಗಳ ಬಳಿಕ ಇನ್ನೊಂದು ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

₹10,000– ಪ್ರತಿ ಟ್ಯಾಬ್ಲೆಟ್ ಖರೀದಿಗೆ ತಗುಲುವ ವೆಚ್ಚ
1,15,000– ರಾಜ್ಯದ ಸರ್ಕಾರಿ ಪ್ರದವಿ ಕಾಲೇಜುಗಳಲ್ಲಿ ಓದುತ್ತಿರುವ ಪ್ರಥಮ ಪದವಿ ವಿದ್ಯಾರ್ಥಿಗಳು
28,908– ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು
11,488– ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಓದುತ್ತಿರುವ ಮೊದಲ ಮೂರು ವರ್ಷದ ವಿದ್ಯಾರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT