ಹಾರೋಹಳ್ಳಿ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ಗ್ರಾಮಗಳಲ್ಲಿ ರಾಜಕೀಯ ತಿಕ್ಕಾಟ ಮತ್ತು ಮೇಲಾಟಗಳು ಆರಂಭವಾಗಿವೆ.
ತಾಲ್ಲೂಕಿನ ಮರಳವಾಡಿ ಹೋಬಳಿಯ ಬನವಾಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಡಿಎಸ್ ಬಂಟಿಂಗ್ಸ್ ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸದ ಪಂಚಾಯಿತಿ ಅಧಿಕಾರಿಗಳು, ಕಾಂಗ್ರೆಸ್‌ನ ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರವಿಕುಮಾರ್ ಮಾತನಾಡಿ, ‘ಪಿಡಿಒ ರಘು ಅವರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದು, ಪ್ರಜಾಧ್ವನಿಯ ಪ್ರಚಾರಕ್ಕೆ ಹಾಕಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಆದರೆ, ಜೆಡಿಎಸ್ ಬ್ಯಾನರ್‌ಗಳು ರಾರಾಜಿಸುತ್ತಿವೆ. ಈ ಮೂಲಕ ಪಿಡಿಒ ಅವರು ಪಕ್ಷಪಾತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಘಟನಾ ಸ್ಥಳಕ್ಕೆ ಪಿಡಿಒ ಬಂದು ಜೆಡಿಎಸ್ ಪೋಸ್ಟರ್‌ಗಳನ್ನು ತೆಗೆಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಕಾಂಗ್ರೆಸ್ ಬ್ಯಾನರ್ ತೆಗೆದಿದ್ದಕ್ಕೆ ಕ್ಷಮೆ ಕೋರಬೇಕು. ಅಲ್ಲಿಯವರೆಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರತಿಭಟನಕಾರರು ಹೇಳಿದ್ದರು. ಆದರೆ, ಜನರಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆ ಕೈಬಿಟ್ಟಿರುವುದಾಗಿ ಕಾಂಗ್ರೆಸ್ ತಿಳಿಸಿದೆ.
ಸರ್ಕಾರದ ಸೂಚನೆಯಂತೆ ಕೆಲಸ
‘ನಾವು ಸರ್ಕಾರದ ಸುತ್ತೋಲೆ ಮತ್ತು ಸೂಚನೆಯಂತೆ ರಾಜಕೀಯ ಪಕ್ಷಗಳು ಅಳವಡಿಸಿದ್ದ ಬಂಟಿಂಗ್ಸ್ ಮತ್ತು ಬ್ಯಾನರ್‌ಗಳನ್ನು ತೆಗೆಸಿದ್ದೇವೆ’ ಎಂದು ಬನವಾಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಸಿ. ರಘು
ಸ್ಪಷ್ಟಪಡಿಸಿದರು.
‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಬ್ಯಾನರ್ ಮತ್ತು ಬಂಟಿಂಗ್ಸ್ ತೆಗೆಯುವಂತೆ ಜಿಲ್ಲಾಧಿಕಾರಿ ಮತ್ತು ಸಿಇಒ ಆದೇಶಿಸಿದ್ದಾರೆ. ಅದರಂತೆ ನಾವು ಕಾರ್ಯ ನಿರ್ವಹಿಸಿದ್ದೇವೆ. ಜೆಡಿಎಸ್‌ನವರು ಭಾನುವಾರ ಪೋಸ್ಟರ್ ಅಂಟಿಸಿದ್ದು, ಅವುಗಳನ್ನು ಸೋಮವಾರ ತೆರವುಗೊಳಿಸಿದ್ದೇವೆ. ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್‌ನವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.