ರಾಮನಗರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಅನುಮತಿ ಕೊಟ್ಟಿರುವುದನ್ನು ಖಂಡಿಸಿ, ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಜೂನಿಯರ್ ಕಾಲೇಜು ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಮಾರ್ಗದುದ್ದಕ್ಕೂ ರಾಜ್ಯಪಾಲರು, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿದರು. ‘ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೊ’ ಎಂದು ಘೋಷಣೆ ಹಾಕಿದರು.
ಈ ವೇಳೆ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಪಿ.ಆರ್. ರಮೇಶ್, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಬಿಜೆಪಿಯೇತರ ಸರ್ಕಾರಗಳನ್ನು ಬೀಳಿಸಲು ಕುತಂತ್ರ ನಡೆಸುತ್ತಲೇ ಬಂದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳೊಂದಿಗೆ ಉತ್ತಮ ಆಡಳಿತ ನೀಡುತ್ತಿದೆ. ಹಾಗಾಗಿ, ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.
ಮುಖಂಡ ಶ್ರೀಕಂಠಯ್ಯ ಮಾತನಾಡಿ, ‘ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ವಿರೋಧ ಪಕ್ಷಗಳ ದನಿ ಅಡಗಿಸುವ ಪ್ರಯತ್ನವಿದು. ಇಂತಹದ್ದಕ್ಕೆ ಕಾಂಗ್ರೆಸ್ ಬೆದರುವುದಿಲ್ಲ. ಇಡೀ ರಾಜ್ಯ ಸಿದ್ದರಾಮಯ್ಯ ಪರವಾಗಿದೆ’ ಎಂದು ಹೇಳಿದರು.
ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರ ಮೂಲಕ, ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್‌ಕುಮಾರ್, ಮಾಜಿ ಶಾಸಕರಾದ ಸಿ.ಎಂ. ಲಿಂಗಪ್ಪ, ಮಾಜಿ ಶಾಸಕ ಎಂ.ಸಿ. ಅಶ್ವಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಗ್ರಾಮಾಂತರ ಅಧ್ಯಕ್ಷ ವಿ.ಎಚ್. ರಾಜು, ಪಕ್ಷದ ಜಿಲ್ಲಾ, ತಾಲ್ಲೂಕು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಇದ್ದರು.
ಮಾತಿನ ಚಕಮಕಿ: ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ಬೆಂಗಳೂರು–ಮೈಸೂರು ಹಳೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಕೆಲ ಹೊತ್ತು ಅಡಚಣೆಯಾಯಿತು. ಇದರಿಂದಾಗಿ, ವಾಹನಗಳು ಸಾಲುಗಟ್ಟಿ ನಿಂತವು. ಇದನ್ನು ಪ್ರಶ್ನಿಸಿದ ವಾಹನ ಸವಾರರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಪೊಲೀಸರು ಮಧ್ಯಪ್ರವೇಶಿಸಿ ಸಮಾಧಾನಪಡಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ಖಂಡಿಸಿ ರಾಮನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಎಚ್.ಸಿ. ಇಕ್ಬಾಲ್ ಹುಸೇನ್ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು
‘ಬಿಜೆಪಿ ಗುಲಾಮರಂತೆ ರಾಜ್ಯಪಾಲ ಕೆಲಸ’
‘ರಾಜ್ಯಪಾಲರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಗುಲಾಮರಾಗಿ ಕೆಲಸ ಮಾಡುತ್ತಿದ್ದು ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಬಿಜೆಪಿ–ಜೆಡಿಎಸ್‌ನವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಕಳಂಕ ತಂದು ವಾಮಮಾರ್ಗದ ಮೂಲಕ ಅಧಿಕಾರಕ್ಕೆರಲು ಸಂಚು ರೂಪಿಸಿದ್ದಾರೆ
ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿಯಾಗಿದೆ. ಭ್ರಷ್ಟಾಚಾರದಲ್ಲಿ ಜೈಲು ಕಂಡಿರುವ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಎರಡೂ ಪಕ್ಷಗಳ ಭ್ರಷ್ಟಾಚಾರಿಗಳು ಕಳಂಕರಹಿತ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.
‘ಸಿದ್ದರಾಮಯ್ಯ ಮುಟ್ಟಿದರೆ ದಂಗೆ’
‘ಹಿಂದುಳಿದ ವರ್ಗಗಗಳು ದಲಿತರು ಹಾಗೂ ಅಲ್ಪಸಂಖ್ಯಾತರ ನಾಯಕರಾದ ಸಿದ್ದರಾಮಯ್ಯ ಅವರನ್ನು ಮುಟ್ಟಿದರೆ ರಾಜ್ಯದಲ್ಲಿ ದಂಗೆ ಆಗಲಿದ್ದು ಬಿಜೆಪಿ- ಜೆಡಿಎಸ್ ಬುಡಮೇಲಾಗಿದೆ. ಜನಪರ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರಿಗೆ ಕಳಂಕ ತರಬೇಕೆಂದು ಅಪ್ಪ–ಮಕ್ಕಳಾದ ಜೆಡಿಎಸ್‌ನ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಷಡ್ಯಂತ್ರ ರೂಪಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧವೇ ಭ್ರಷ್ಟಾಚಾರದ ಹತ್ತಾರು ಪ್ರಕರಣಗಳಿವೆ. ಅಂತಹದ್ದರಲ್ಲಿ ಅಬ್ರಾಹಂ ಕೈಯಿಂದ ಅರ್ಜಿ ಹಾಕಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ಇಡೀ ರಾಜ್ಯವಿದ್ದು ಅವರ ವಿಷಯಕ್ಕೆ ಬಂದರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಕೆ. ಶೇಷಾದ್ರಿ ಶಶಿ ಎಚ್ಚರಿಕೆ ನೀಡಿದರು.
ರಾಜ್ಯಪಾಲರಿಗೆ ಕಾಂಗ್ರೆಸ್ ಪ್ರಶ್ನೆಗಳು?
* ಎಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೋಗಸ್ ಸಂಸ್ಥೆಗೆ 2007ರಲ್ಲಿ 550 ಎಕರೆ ಗಣಿ ಸಂಪತ್ತನ್ನು ನೀಡಿ ಸಾವಿರಾರು ಕೋಟಿ ಲೂಟಿಗೆ ಅನುಮತಿ ನೀಡಿದ್ದಾರೆ. ತನಿಖೆ ನಡೆಸಿರುವ ಲೋಕಾಯುಕ್ತವು ಎಚ್‌ಡಿಕೆ ನೇರ ಪಾತ್ರವಿರುವುದನ್ನು ಖಚಿತಪಡಿಸಿಕೊಂಡು ಪ್ರಾಸಿಕ್ಯೂಷನ್‌ಗೆ ಕಳೆದ ನವೆಂಬರ್‌ನಲ್ಲಿ ಅನುಮತಿ ಕೋರಿದೆ. ಇದುವರೆಗೆ ರಾಜ್ಯಪಾಲರು ಯಾಕೆ ಅನುಮತಿ ಕೊಟ್ಟಿಲ್ಲ?
* ಬಿಜೆಪಿಯ ಮಾಜಿ ಸಚಿವರಾದ ಮುರುಗೇಶ ನಿರಾಣಿ ಶಶಿಕಲಾ ಜೊಲ್ಲೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿ ಹಲವರ ಮೇಲೆ ಲಂಚ ವಸೂಲಿ ಕುರಿತು ಪ್ರಾಥಮಿಕ ಸಾಕ್ಷ್ಯಗಳು ಸಿಕ್ಕಿದೆ. ಅವರ ವಿರುದ್ದ ತನಿಖೆಗೆ ಲೋಕಾಯುಕ್ತ 2021ರಲ್ಲೇ ಅನುಮತಿ ಕೋರಿದೆ. ಈ ವಿಷಯದಲ್ಲಿ ರಾಜ್ಯಪಾಲರ ಮೌನವೇಕೆ?
* ಮುಡಾ ವಿಷಯದಲ್ಲಿ ಮುಖ್ಯಮಂತ್ರಿಗೆ ನೋಟಿಸ್ ನೀಡುವ ಮೊದಲು ರಾಜ್ಯಪಾಲರು ಯಾಕೆ ಕಾನೂನು ಅಭಿಪ್ರಾಯ ಪಡೆದಿಲ್ಲ? ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ ಜಾಗವನ್ನು ಮುಡಾ ಕಾನೂನುಬಾಹಿರವಾಗಿ ವಶಪಡಿಸಿಕೊಂಡು ಬಡಾವಣೆಯ ನಿರ್ಮಿಸಿತ್ತು. ಇದನ್ನು ಪ್ರಶ್ನಿಸಿ ಪರಿಹಾರ ಕೋರಿದಾಗ ಮುಡಾ ಅವರಿಗೆ 50:50 ಅನುಪಾತದಂತೆ ಪರ್ಯಾಯ ನಿವೇಶನಗಳನ್ನು ಕೊಟ್ಟಿದೆ. ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇನಿದೆ?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.