ರಾಮನಗರ: ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತುಗಳು ಹಾಗೂ ಅನುಭವಿ ದೈಹಿಕ ಶಿಕ್ಷಕರನ್ನು ಕೊಟ್ಟು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಹೇಳಿದರು.
ನಗರದ ಜಿಲ್ಲಾ ಕ್ರೀಢಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕೀಡಾಕೂಟದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿಪತ್ರ ಮತ್ತು ಸ್ಮರಣಿಕೆಗಳನ್ನು ವಿತರಿಸಿ ಅವರು ಮಾತನಾಡಿದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲೂ ದಸರಾ ಸಿಎಂ ಕಪ್ ನಡೆಯುತ್ತಿದ್ದು, ಇದು ವಿವಿಧ ಕ್ರೀಡೆಗಳಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣ ಮಾಡುವ ಉತ್ತಮ ವೇದಿಕೆಯಾಗಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಪುಟ್ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗ, ಕುಸ್ತಿ, ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಹ್ಯಾಂಡ್ಬಾಲ್, ಹಾಕಿ, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ತಂಡಗಳು ವಿವಿಧ ಜಿಲ್ಲೆಗಳಲ್ಲಿ ನಡೆಯುವ ವಿಭಾಗೀಯ ಮಟ್ಟದಲ್ಲಿ ಪ್ರತಿನಿಧಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ರೀಡೆಗಳಲ್ಲಿ ಪರಿಣತಿ ಪಡೆಯಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡುವ ಉದ್ದೇಶದಿಂದ ಒಂದು ಹಂತದಲ್ಲಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ನೀಡಿರುವ ₹ 20 ಕೋಟಿ ಅನುದಾನದಲ್ಲಿ ರಾಜ್ಯ ಮಟ್ಟದ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಲಾಗುವುದು. ಒಳಾಂಗಣ ಆಟ, ಸಾಂಸ್ಕ್ರತಿಕ ಚಟುವಟಿಕೆಗಳಿಗೆ ವೇದಿಕೆ, ಪೆವಿಲಿಯನ್ ನಿರ್ಮಾಣ, ವಾಕಿಂಗ್ ಟ್ರ್ಯಾಕ್ ಮಾಡುವ ಕ್ರಿಯಾಯೋಜನೆ ಸಿದ್ಧವಿದೆ. ಈ ಭಾಗದ ವಿದ್ಯಾರ್ಥಿಗಳು ಪಾಠದ ಜೊತೆಗೆ ಕ್ರೀಡೆಯಲ್ಲೂ ಗುರುತಿಸಿಕೊಂಡು ಕ್ಷೇತ್ರಕ್ಕೆ ಹೆಸರು ತರಬೇಕು ಎಂದು ಕಿವಿಮಾತು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕಿ ಅನಿತಾ, ದೈಹಿಕ ಶಿಕ್ಷಣ ಪರಿವೀಕ್ಷಕರು, ಶಿಕ್ಷಣಾಧಿಕಾರಿ ನೀಲಕಂಠಸ್ವಾಮಿ ಎಸ್. ಮಠ, ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಮ್ಮ, ರಂಗಸ್ವಾಮಿ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ಶಿವಣ್ಣ, ಹೋಲಿ ಕ್ರಸ್ಸೆಂಟ್ ಆಂಗ್ಲ ಶಾಲೆಯ ಅಲ್ತಾಪ್ಅಹಮದ್, ಹಾರೋಹಳ್ಳಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್, ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.