ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

₹ 61ಕೋಟಿ ಪ್ರೋತ್ಸಾಹ ಧನ ಬಾಕಿ: ಪ್ರಶ್ನಿಸಲು ರೈತರಿಗೆ ಎಚ್‌ಡಿಕೆ ಸಲಹೆ

ಹಾಲು ಉತ್ಪಾದಕರಿಗೆ ₹ 61ಕೋಟಿ ಪ್ರೋತ್ಸಾಹ ಧನ ಬಾಕಿ
Published 24 ಜೂನ್ 2024, 7:31 IST
Last Updated 24 ಜೂನ್ 2024, 7:31 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸರ್ಕಾರ ಚನ್ನಪಟ್ಟಣ ತಾಲ್ಲೂಕಿನ ಹಾಲು ಉತ್ಪಾದಕರಿಗೆ ₹61ಕೋಟಿ ಪ್ರೋತ್ಸಾಹ ಹಣ ಬಾಕಿ ಉಳಿಸಿಕೊಂಡಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬೈರಾಪಟ್ಟಣ ಬಮೂಲ್ ಶಿಬಿರ ಕಚೇರಿ ಆವರಣದಲ್ಲಿ ಭಾನುವಾರ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ನಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.

ರಾಜ್ಯದ ಉಪಮುಖ್ಯಮಂತ್ರಿ ತಾಲ್ಲೂಕಿನಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಲು ಬರುತ್ತಿದ್ದಾರೆ. ತಾಲ್ಲೂಕಿನಲ್ಲಿ ₹61ಕೋಟಿ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನ ಮೊದಲು ನೀಡಿ, ನಂತರ ಕಾರ್ಯಕ್ರಮ ಮಾಡಿ ಎಂದು ರೈತರು ಅವರನ್ನು ಪ್ರಶ್ನೆ ಮಾಡಬೇಕು ಎಂದರು.

ಹಾಲು ಉತ್ಪಾದಕ ರೈತರು ಹೈನುಗಾರಿಕೆಯಲ್ಲಿ ಹಲವು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಹಿಳೆಯರು ಕೂಡ  ಹೈನುಗಾರಿಕೆಯಲ್ಲಿ ಶ್ರಮ ವಹಿಸುತ್ತಿದ್ದಾರೆ. ಆದರೆ, ಹೈನುಗಾರರ ಕಷ್ಟಕ್ಕೆ ಸೂಕ್ತ ಪ್ರತಿಫಲ ಸಿಗುತ್ತಿಲ್ಲ. ಒಂದು ಲೀಟರ್ ಹಾಲಿಗೆ ಅತಿ ಕಡಿಮೆ ಬೆಲೆ ನೀಡಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಹೆಚ್ಚು ಬೆಲೆ ನೀಡಲಾಗುತ್ತಿದೆ. ಲೀಟರ್ ಗೆ ಕನಿಷ್ಠ ₹50 ನೀಡಿದರೆ ಹಾಲು ಉತ್ಪಾದಕ ರೈತರ ಬದುಕು ಸ್ವಲ್ಪಮಟ್ಟಿಗೆ ಸುಧಾರಣೆಯಾಗಲಿದೆ ಎಂದರು.

ವಿದ್ಯಾರ್ಥಿಗಳು ಶಿಸ್ತು, ಸಂಯಮ ಬೆಳೆಸಿಕೊಂಡು ಓದಿನ ಕಡೆಗೆ ಹೆಚ್ಚು ಗಮನ ನೀಡಿ ಸಾಧನೆ ಮಾಡಬೇಕು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ. ಈ ವೇಳೆಯಲ್ಲಿ ಇತರ ವಿಚಾರ ಬಗ್ಗೆ ಗಮನ ನೀಡದೆ ಓದಿನ ಕಡೆಗೆ ಹೆಚ್ಚು ಒತ್ತು ಕೊಡಬೇಕು. ಇದರಿಂದ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಮಾತನಾಡಿ, ತಾಲ್ಲೂಕಿನಲ್ಲಿ ನೀರಾವರಿ ಯೋಜನೆಗಳು ಬಂದ ನಂತರ ತಾಲ್ಲೂಕಿನ ಕೆರೆಗಳು ತುಂಬಿದ ನಂತರ ರೈತರು ಹೆಚ್ಚು ಹೈನುಗಾರಿಕೆಯಲ್ಲಿ ತೊಡಗಿಕೊಂಡು ಪ್ರಗತಿ ಸಾಧಿಸುತ್ತಿದ್ದಾರೆ. ತಾಲ್ಲೂಕು ಹಾಲು ಉತ್ಪಾದನೆಯಲ್ಲಿ ಬಮೂಲ್ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು.

ಬಮೂಲ್ ನಿರ್ದೇಶಕ ಎಚ್.ಸಿ.ಜಯಮುತ್ತು ಮಾತನಾಡಿ, ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ನೀಡುತ್ತಿರುವ ಪ್ರತಿಭಾ ಪುರಸ್ಕಾರ, ಪರಿಹಾರ ಹಣದ ಬಗ್ಗೆ ವಿವರಿಸಿದರು.

 ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಂ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಮುಖಂಡರಾದ ಬೋರ್ ವೆಲ್ ರಾಮಚಂದ್ರು, ಬಮೂಲ್ ಅಧಿಕಾರಿ ವರ್ಗ, ಸಿಬ್ಬಂದಿ, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT