ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀರು, ಮೇವಿಗೆ ಪಂಚಾಯಿತಿಗೆ ತಲಾ ₹10 ಲಕ್ಷ: ಸಚಿವ ರಾಮಲಿಂಗಾರೆಡ್ಡಿ

Published 2 ಮಾರ್ಚ್ 2024, 6:38 IST
Last Updated 2 ಮಾರ್ಚ್ 2024, 6:38 IST
ಅಕ್ಷರ ಗಾತ್ರ

ರಾಮನಗರ: ‘ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವಿನ ವ್ಯವಸ್ಥೆಗಾಗಿ ಪ್ರತಿ ಪಂಚಾಯಿತಿಗೆ ₹10 ಲಕ್ಷ ಹಾಗೂ ತಾಲ್ಲೂಕಿಗೆ ₹1 ಕೋಟಿ ನೀಡುವುದಕ್ಕಾಗಿ ಜಿಲ್ಲಾಧಿಕಾರಿ ಖಾತೆಗೆ ₹10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಬರಪೀಡಿತವಾಗಿರುವ ಜಿಲ್ಲೆಯ ಐದೂ ತಾಲ್ಲೂಕುಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಅಧಿಕಾರಿಗಳು ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಕ್ಕಾಗಿ ಕಳೆದ ಸಾಲಿನಲ್ಲೂ ₹1 ಕೋಟಿ ಅನುದಾನ ನೀಡಲಾಗಿತ್ತು. ಅದರಲ್ಲಿ ಹೊಸದಾಗಿ 49 ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಈಗಿರುವ ಬಾವಿಗಳ ದುರಸ್ತಿಗಾಗಿ ಪ್ರಸಕ್ತ ಸಾಲಿನಲ್ಲಿ ₹25 ಲಕ್ಷ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.

‘ಕುಡಿಯುವ ನೀರು ಸರಬರಾಜು ಮಾಡಲು ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ. ಟೆಂಡರ್‌ನಲ್ಲಿ ಯಾವುದೇ ಸಂಸ್ಥೆಗಳು ಭಾಗವಹಿಸಿಲ್ಲ. ಆದ್ದರಿಂದ ತಾಲ್ಲೂಕು ಪಂಚಾಯಿತಿವಾರು ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸಬೇಕು. ಯಾವುದೇ ಲೋಪದೋಷ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು

‘ಜಿಲ್ಲೆಯಲ್ಲಿ 1800 ಜನರಿಗೆ ಇ-ಸ್ವತ್ತು ವಿತರಿಸಲಾಗಿದೆ. ನಮೂನೆ 6-10 ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ವಿಳಂಬವಾಗುತ್ತಿದೆ. ಇದನ್ನು ಕೂಡಲೇ ಇತ್ಯರ್ಥ ಪಡಿಸಲಾಗುವುದು. ಗ್ರಾಮಗಳಲ್ಲಿ ಸ್ಮಶಾನದ ಸಮಸ್ಯೆ ಇರುವುದರಿಂದ ಅಗತ್ಯವಿರುವ ಕಡೆ ಸ್ಮಶಾನಕ್ಕೆ ಜಾಗ ಗುರುತಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಬಾಕಿ ಇರುವ ಫಲಾನುಭವಿಗಳ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು. ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕು. ಈ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ಮಾಡಬಾರದು’ ಎಂದು ತಿಳಿಸಿದರು.

ಶಾಸಕರಾದ ಎಚ್‌.ಎ. ಇಕ್ಬಾಲ್ ಹುಸೇನ್, ಎಚ್.ಸಿ. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಅ. ದೇವೆಗೌಡ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು
ಅಂಕಿ ಅಂಶ... ₹10 ಕೋಟಿ ಬರ ಪರಿಹಾರ ಕಾರ್ಯಕ್ಕಾಗಿ ಡಿ.ಸಿ ಖಾತೆಗೆ ಜಮಾ ಆಗಿರುವ ಮೊತ್ತ ₹1 ಕೋಟಿ ಪ್ರತಿ ತಾಲ್ಲೂಕಿಗೆ ಬರ ಪರಿಹಾರ ಕಾರ್ಯಕ್ಕೆ ಬಿಡುಗಡೆಯಾದ ಮೊತ್ತ ₹25 ಲಕ್ಷ ಕೊಳವೆಬಾವಿ ದುರಸ್ತಿಗೆ ಬಿಡುಗಡೆಯಾಗಿರುವ ಹಣ
‘ತಡೆಗೋಡೆಗೆ ಕಾಮಗಾರಿ ಆರಂಭ’
‘ಜಿಲ್ಲೆಯು ಕಾವೇರಿ ವನ್ಯಜೀವಿಧಾಮ ಮತ್ತು ಬನ್ನೇರುಘಟ್ಟ ಅರಣ್ಯ ಪ್ರದೇಶವನ್ನು ಒಳಗೊಂಡಿದೆ. ಇಲ್ಲಿ ಅಂದಾಜು 400 ಕಾಡಾನೆಗಳಿದ್ದು ಇವುಗಳಲ್ಲಿ 30–40 ಆನೆಗಳು ಹೆಚ್ಚಾಗಿ ಕಾವೇರಿ ಅರಣ್ಯ ಪ್ರದೇಶದಲ್ಲಿ ಓಡಾಡುತ್ತಿವೆ. ಇದುವರೆಗೆ 10 ಜನ ಆನೆ ದಾಳಿಗೆ ಬಲಿಯಾಗಿದ್ದಾರೆ. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ ಕಾಡಿನಿಂದ ಆನೆಗಳು ಹೊರ ಬಾರದಂತೆ ತಡೆಯಲು 33 ಕಿ.ಮೀ. ಬ್ಯಾರಿಕೇಡ್ ನಿರ್ಮಿಸಲು ಅನುಮತಿ ದೊರಕಿದ್ದು ಕಾಮಗಾರಿಯು ಪ್ರಗತಿಯಲ್ಲಿದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
‘ಜನರ ಸಮಸ್ಯೆಗೆ ಶೀಘ್ರ ಪರಿಹಾರ’
ಮಾಗಡಿ (ರಾಮನಗರ): ‘ಹಲವು ದಿನಗಳಿಂದ ಬಾಕಿ ಇರುವ ಜನರ ಸಮಸ್ಯೆಯನ್ನು ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಪರಿಹರಿಸಲು ಮತ್ತು ಜನ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳನ್ನು ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ತಾಲ್ಲೂಕಿನ ಸೋಲೂರು ಗ್ರಾಮದ ಆರ್ಯ ಈಡಿಗರ ಸಂಸ್ಥಾನ ಮಠದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಜನರ ಸಮಸ್ಯೆಗೆಳಿಗೆ ಪರಿಹಾರ ನೀಡಲು ಕಳೆದ 4 ತಿಂಗಳಿಂದ ಜನತಾ ದರ್ಶನ ಆಯೋಜಿಸಲಾಗುತ್ತಿದೆ. ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕ ಕೌಂಟರ್‌ ತೆರೆಯಲಾಗಿದೆ. ಜಿಲ್ಲಾಧಿಕಾರಿ ಜಿ.ಪಂ. ಸಿಇಒ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು. ಇಂದು ಸ್ವೀಕರಿಸಿರುವ ಜನರ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಉಪ ವಿಭಾಗಾಧಿಕಾರಿ ಬಿನೋಯ್ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT