ಬುಧವಾರ, ನವೆಂಬರ್ 25, 2020
22 °C

ರಾಮನಗರ: ಬಿಜೆಪಿ ಜಿಲ್ಲಾ ಘಟಕದಿಂದ ವಾಲ್ಮೀಕಿ, ಪಟೇಲ್‌ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ‘ರಾಮಾಯಣ ಮಹಾಕಾವ್ಯದ ಕರ್ತೃ ಮಹರ್ಷಿ ವಾಲ್ಮೀಕಿ ಹಾಗೂ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯ್ ಪಟೇಲ್ ಇಬ್ಬರೂ ಪ್ರಾತಃಸ್ಮರಣೀಯರು’ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಹಾಗೂ ಸರ್ದಾರ್ ವಲ್ಲಭಬಾಯ್ ಪಟೇಲ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕವಿಗೆ ಕವಿ ಮುನಿವಂ...’ ಎಂದು ಹೇಳುತ್ತಾರೆ. ಆದರೆ, ಇದಕ್ಕೆ ಅಪವಾದ ಎಂಬಂತೆ ವಾಲ್ಮೀಕಿ ಅವರ ವ್ಯಕ್ತಿತ್ವ ಹಾಗೂ ಘನ ವಿದ್ವತ್ಪೂರ್ಣವಾದ ವಿಚಾರಗಳನ್ನು ರಾಷ್ಟ್ರಕವಿ ಕುವೆಂಪು ಆದಿಯಾಗಿ ಕನ್ನಡದ ಬಹುತೇಕ ಕವಿಗಳು ಮುಕ್ತಕಂಠದಿಂದ ಹಾಡಿ ಹೊಗಳಿದ್ದಾರೆ. ಇದು ಅವರ ಪ್ರತಿಭೆ ಮತ್ತು ವಿದ್ವತ್‌ ಎಂಥದ್ದು ಎಂಬುದರ ದ್ಯೋತಕವಾಗಿದೆ’ ಎಂದರು.

ಭಾರತ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯ್ ಪಟೇಲ್‌ ಅವರು ಜನಿಸಿದ ಈ ದಿನದಂದು ದೇಶ ಅವರನ್ನು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ಹೇಳಿದರು.

ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಡಿ. ನರೇಂದ್ರ ಮಾತನಾಡಿ, ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯವು ಇಂದಿಗೂ ಭಾರತೀಯರಿಗೆ ಸ್ಫೂರ್ತಿ ಹಾಗೂ ಭಕ್ತಿಯ ಸಂಕೇತವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ವೇಳೆ ನೂರಾರು ಪ್ರಾಂತ್ಯಗಳನ್ನು ಒಗ್ಗೂಡಿಸಿ ಅಖಂಡ ಭಾರತ ನಿರ್ಮಿಸಿದ ಪಟೇಲರು ಏಕತೆಯ ಸಂಕೇತವಾಗಿದ್ದಾರೆ ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ ರೆಡ್ಡಿ, ನಗರ ಮಂಡಲ ಕಾರ್ಯದರ್ಶಿ ಜೆ. ದರ್ಶನ್, ವಾಲ್ಮೀಕಿ ಸಮಾಜದ ಜಿಲ್ಲಾ ಅಧ್ಯಕ್ಷ ಕೃಷ್ಣಪ್ಪ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.