ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಸಮಸ್ಯೆ ಪರಿಹಾರಕ್ಕೆ ಆದ್ಯತೆ: ಸಚಿವ ರಾಮಲಿಂಗಾರೆಡ್ಡಿ

ಚನ್ನಪಟ್ಟಣದಲ್ಲಿ ನಡೆದ ಜನತಾ ದರ್ಶನ
Published 5 ಜನವರಿ 2024, 4:19 IST
Last Updated 5 ಜನವರಿ 2024, 4:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ಜನರ ಸಮಸ್ಯೆ ಪರಿಶೀಲಿಸಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನಗರದ ಶತಮಾನೋತ್ಸವ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಜನತಾ ದರ್ಶನ ಉದ್ಘಾಟಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮ ಜನರಿಗೆ ಸ್ಪಂದಿಸುವ ಕಾರ್ಯಕ್ರಮವಾಗಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆತಾಗಲೇ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಎಲ್ಲ ಅಧಿಕಾರಿಗಳು ಜನರ ಸಮಸ್ಯೆ ಆಲಿಸಲು ಸಮಯ ನೀಡಬೇಕು ಎಂದರು.

ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆ ಅಥವಾ ಅಹವಾಲುಗಳಿದ್ದಲ್ಲಿ ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೇರವಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಇತ್ಯರ್ಥಪಡಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೆ ಪರಿಹಾರ ನೀಡುತ್ತಾರೆ. ವಿಳಂಬವಾದರೆ ಹಿಂಬರಹ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಜನರ ಸಮಸ್ಯೆಗಳನ್ನು ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ ನಾಲ್ಕು ತಿಂಗಳಿನಿಂದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆ ಆಲಿಸಲು ಪ್ರತ್ಯೇಕವಾಗಿ ಕೌಂಟರ್ ನಿರ್ಮಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ ಎಂದು ತಿಳಿಸಿದರು.

ಪೋಡಿ, ಖಾತೆ ಸಮಸ್ಯೆಗಳ ಕುರಿತು ರೈತರು ಅರ್ಜಿ ಸಲ್ಲಿಸಿದ್ದು, ಈ ಸಮಸ್ಯೆ ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯ ಪ್ರತಿ ಹಳ್ಳಿಗೂ ಪೈಪ್ ಮೂಲಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಪ್ರತಿಯೊಂದು ಮನೆಗೂ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 240 ಅರ್ಜಿ  ಸ್ವೀಕೃತವಾಯಿತು. ಇದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತಿ ಹೆಚ್ಚು 124 ಅರ್ಜಿಗಳು ಸ್ವೀಕೃತಗೊಂಡಿದ್ದು ವಿಶೇಷವಾಗಿತ್ತು.

ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಮಾಜಿ ಶಾಸಕ ಎಂ.ಸಿ.ಅಶ್ವತ್ಥ್‌, ವಿಪತ್ತು ನಿರ್ವಹಣೆ, ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಜಿ.ಪಂ ಸಿಇಒ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ರಾಮನಗರ ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ್ ಮಹೇಂದ್ರ, ತಾ.ಪಂ ಇಒ ಶಿವಕುಮಾರ್, ಡಿವೈಎಸ್ಪಿ ಗಿರಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು
ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು

ಆನೆ ದಾಳಿ ತಡೆಗೆ ₹45 ಕೋಟಿ ಬಿಡುಗಡೆ

ಜಿಲ್ಲೆಯಲ್ಲಿ ಆನೆ ದಾಳಿಯಿಂದ ಕಳೆದ ಆರು ತಿಂಗಳಿನಿಂದ  7 ಮಂದಿ ಮೃತಪಟ್ಪಿದ್ದಾರೆ. ಕಾಡಾನೆಗಳ ಉಪಟಳ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕಾಡಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಸರ್ಕಾರದಿಂದ ₹45 ಕೋಟಿ ಬಿಡುಗಡೆಯಾಗಿದೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು.

ಆನೆ ದಾಳಿ ನಿಯಂತ್ರಿಸಲು ಶೀಘ್ರ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಆರಂಭಿಸಲಾಗುವುದು. ಕಾಡಾನೆಗಳ ದಾಳಿ ಬಗ್ಗೆ ರೈತರು ಹಲವು ಅರ್ಜಿ ಸಲ್ಲಿಸಿದ್ದಾರೆ. ಬೆಳೆ ನಾಶ ಪರಿಹಾರ ಮೊತ್ತ ಹೆಚ್ಚಿಸುವ ಕುರಿತು ಹಾಗೂ ಇತರ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಬೆಳೆ ಪರಿಹಾರದ ಮೊತ್ತ ಹೆಚ್ಚುವರಿ ಮಾಡಲು ಕಮಿಟಿಯೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆಯಡಿ ಮಹಿಳೆಯರು ಹೆಚ್ಚಾಗಿ ಪ್ರಯಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುವರಿ ಸರ್ಕಾರಿ ಬಸ್‌ ವ್ಯವಸ್ಥೆ ಮಾಡಲು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಹೆಚ್ಚುವರಿ ಬಸ್‌ ಖರೀದಿಸಿ ಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಮಾಡಲಾಗುವುದು. ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT