ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾರ್ಯಗಳಿಗೆ ಒತ್ತು: ಅನಿತಾ ಭರವಸೆ

₹5.65 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ
Last Updated 19 ಆಗಸ್ಟ್ 2019, 14:38 IST
ಅಕ್ಷರ ಗಾತ್ರ

ರಾಮನಗರ: ‘ರಾಜ್ಯದಲ್ಲಿ ಯಾವುದೇ ಸರ್ಕಾರ ಇದ್ದರೂ, ನನ್ನ ಕ್ಷೇತ್ರದ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತೇನೆ’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಸುಗ್ಗನಹಳ್ಳಿ ಗ್ರಾಮದ ಚಿಕ್ಕಮ್ಮ ದೇವಾಲಯದ ಬಳಿ ₹50 ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ, ಕುಂಬಾರದೊಡ್ಡಿ ಬಳಿ ₹15 ಲಕ್ಷ ವೆಚ್ಚದಲ್ಲಿ ಸೇತುವೆ ವಿಸ್ತರಣೆ ಮತ್ತು ₹5 ಕೋಟಿ ವೆಚ್ಚದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಅಭಿವೃದ್ಧಿ ಕಾರ್ಯಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಿಂದೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಹೆಚ್ಚಿನ ಅನುದಾನವನ್ನು ನೀಡಿದ್ದು, ಕೆಲಸಗಳು ಪ್ರಗತಿಯಲ್ಲಿವೆ. ಇಂದು ₹5.65 ಕೋಟಿ ವೆಚ್ಚದ ಕೆಲಸಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಆ ಮೂಲಕ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದರು.

‘ರಾಮನಗರದಲ್ಲಿ ಶೈಕ್ಷಣಿಕ ಕ್ಷೇತ್ರ ಮುಂದುವರಿಯಲು ಕುಮಾರಸ್ವಾಮಿ ಕಾರಣಕರ್ತರು. ಅವರು ಇಲ್ಲಿನ ಶಾಸಕರಾಗಿದ್ದ ಸಮಯದಲ್ಲಿ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಹಾಗೂ ಐಟಿಐ ಕಾಲೇಜುಗಳನ್ನು ತೆರೆಯಲಾಯಿತು. ಇದರಿಂದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಡೆಸಲು ಸಹಕಾರಿಯಾಯಿತು’ ಎಂದರು.

ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಎಸ್.ಎ.ಮಹೇಂದ್ರ ಮಾತನಾಡಿ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಿಂದ ಈಗ ಸ್ವಂತ ಸ್ಥಳಕ್ಕೆ ಕಾಲೇಜು ಸ್ಥಳಾಂತರವಾಗಿದೆ. ಪ್ರತಿ ವರ್ಷ ದಾಖಲಾತಿ ಪ್ರಮಾಣ ಹೆಚ್ಚಾಗುತ್ತಿದೆ. ಅದಕ್ಕೆ ಪೂರಕವಾಗಿ ಭೋದನಾ ಕೊಠಡಿಗಳು, ಕಾಂಪೌಂಡ್, ವಸತಿ ನಿಲಯ, ಸುಗಮ ರಸ್ತೆ ಮತ್ತು ಹೆದ್ದಾರಿ ಬಳಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಈಗಾಗಲೇ ಕಾಲೇಜು ನಿರ್ಮಾಣಕ್ಕೆ ಕೆಆರ್‌ಡಿಸಿಎಲ್ ₹8 ಕೋಟಿ ಮಂಜೂರಾಗಿದ್ದು, ಕೆಲಸಗಳು ಪ್ರಗತಿಯಲ್ಲಿವೆ. ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಮಾಡುವಂತೆ ತಾವು ಸಂಬಂದಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಅಶ್ವಥ್, ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಾ ರಾಮಕೃಷ್ಣಯ್ಯ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕೆ.ಎಚ್.ಶಂಕರ್, ಸಹಾಯಕ ಎಂಜಿನಿಯರ್ ರವಿಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹದೇವ, ಸದಸ್ಯರಾದ ಕೃಷ್ಣಪ್ಪ, ಮುಕುಂದ, ಬೈರಪ್ಪ, ಮುಖಂಡರಾದ ಬಿ. ಉಮೇಶ್, ಎಸ್.ಆರ್. ರಾಮಕೃಷ್ಣಯ್ಯ, ಅಜಯ್ ದೇವೇಗೌಡ, ಗುರುಲಿಂಗಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT