ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರೋಗ್ಯ ವಿ.ವಿ. ಕ್ಯಾಂಪಸ್‌ ನಿರ್ಮಾಣ ಶೀಘ್ರ’

ರಾಮನಗರ: ವಿವಿಧ ಕಾಮಗಾರಿಗೆ ಶಾಸಕಿ ಅನಿತಾರಿಂದ ಚಾಲನೆ
Last Updated 2 ಆಗಸ್ಟ್ 2019, 13:29 IST
ಅಕ್ಷರ ಗಾತ್ರ

ರಾಮನಗರ: ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅನಿತಾ ಕುಮಾರಸ್ವಾಮಿ ಶುಕ್ರವಾರ ಚಾಲನೆ ನೀಡಿದರು.

ಒಟ್ಟು ₨3.4 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅವರು ಭೂಮಿಪೂಜೆ ನೆರವೇರಿಸಿದರು. ‘ರಾಮನಗರದಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಭೂಪರಿಹಾರ ಸಂಬಂಧ ರೈತರೊಂದಿಗೆ ಮಾತುಕತೆ ನಡೆದಿದ್ದು, ಬಹುತೇಕರು ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

ಬಿಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಸ್ ಸಿಪಿ ಯೋಜನೆ ಅಡಿಯಲ್ಲಿ ₨2.9 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ಟಿಎಸ್ ಪಿ ಯೋಜನೆ ಅಡಿಯಲ್ಲಿ ಚಿಕ್ಕೇಗೌಡನದೊಡ್ಡಿ ಬಳಿ ಪರಿಶಿಷ್ಟ ಪಂಗಡ ಕಾಲೊನಿ ಮತ್ತು ತಿಬ್ಬೇಗೌಡನದೊಡ್ಡಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೊನಿಯಲ್ಲಿ ಕಾಂಕ್ರಿಟ್ ರಸ್ತೆಅಭಿವೃದ್ದಿ , ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಜಯಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ₨50 ಲಕ್ಷ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ನಂತರ ರಾಜೀವ್ ಗಾಂಧಿಪುರ ಗ್ರಾಮಕ್ಕೆ ಅವರು ಭೇಟಿ ನೀಡಿದರು. ಈ ಸಂದರ್ಭ ಮಹಿಳೆಯರು ಬೆಲ್ಲದ ಆರತಿ ಬೆಳಗಿ ಬರಮಾಡಿಕೊಂಡರು.

ಸೈಕಲ್‌ ವಿತರಣೆ: ರಾಮನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಸಾಂಕೇತಿಕವಾಗಿ ತಾಲೂಕಿನ 100 ವಿದ್ಯಾರ್ಥಿಗಳಿಗೆ ಸೈಕಲ್‌ ವಿತರಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು ‘2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ ನೀಡುವ ಯೋಜನೆ ಜಾರಿಗೆ ತಂದರು. ಇದರಿಂದಾಗಿ ಗ್ರಾಮೀಣ ಪ್ರದೇಶ ಹಾಗೂ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ಶಾಲೆಗೆ ತೆರಳಲು ಅನುಕೂಲವಾಗಿದೆ’ ಎಂದು ತಿಳಿಸಿದರು.
ಅಹವಾಲು ಸ್ವೀಕಾರ: ಮಧ್ಯಾಹ್ನ ಶಾಸಕರ ಭವನದಲ್ಲಿ ಅನಿತಾ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.


‘ಕ್ಷೇತ್ರದ ಅಭಿವೃದ್ಧಿಗೆ ತೊಂದರೆಯಿಲ್ಲ’
‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರೂ ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ತೊಂದರೆ ಆಗದು’ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ವಿಜಯನಗರ ಬಡಾವಣೆಯಲ್ಲಿರುವ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂದರ್ಭ ಅವರು ಪತ್ರಕರ್ತರ ಜೊತೆ ಮಾತನಾಡಿದರು. ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಯಾರಿಗೂ ತೊಂದರೆ ನೀಡಿಲ್ಲ. ಬಿಜೆಪಿ ಸಹ ಹಾಗೆಯೇ ನಡೆದುಕೊಳ್ಳಲಿದ್ದು, ಸಣ್ಣತನದ ರಾಜಕೀಯ ಮಾಡುವುದಿಲ್ಲ ಎಂಬ ವಿಶ್ವಾಸವಿದೆ’ ಎಂದರು.

ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಪ್ರತಿಕ್ರಿಯಿಸಿ ‘ಸದ್ಯ ಆತ ಹೊಸ ಸಿನಿಮಾಗಳಲ್ಲಿ ಅಭಿನಯಿಸಲು ಸಹಿ ಮಾಡಿದ್ದಾನೆ. ಉಪ ಚುನಾವಣೆ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT