ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷದಿಂದ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ಸಾಯಿಮಂದಿರದಲ್ಲಿ ಶುಕ್ರವಾರ ಚನ್ನಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಯಮುತ್ತು ಅವರಿಂದ ನೀಡಲಾಗುವ ಗಣೇಶ ಮೂರ್ತಿಗಳನ್ನು ವಿತರಿಸಿ, ಸುದ್ದಿಗಾರರ ಜೊತೆ ಮಾತನಾಡಿದರು. ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿಯನ್ನು ಹಾಕುವ ಕೆಲಸವನ್ನು ಮೈತ್ರಿ ಪಕ್ಷದ ಹೈಕಮಾಂಡ್ ಮಾಡುತ್ತದೆ ಎಂದರು.
ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಬಿಜೆಪಿಯ ಹಿರಿಯ ವರಿಷ್ಠರ ಜೊತೆಗೂ ಕೂಡ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು. ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಉಪಚುನಾವಣೆಗೆ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನು ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಎಲ್ಲರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಅಂತಿಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸಿದ್ಧತೆ ಮಾಡಿಕೊಳ್ಳಲಿದೆ ಎಂದರು.
ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಎಚ್.ಸಿ. ಜಯಮುತ್ತು, ಮುಖಂಡರಾದ ಗೋವಿಂದಹಳ್ಳಿ ನಾಗರಾಜು, ಹಾಪ್ ಕಾಮ್ಸ್ ದೇವರಾಜು, ಕುಕ್ಕೂರುದೊಡ್ಡಿ ಜಯರಾಂ ಇತರರು ಭಾಗವಹಿಸಿದ್ದರು.