ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಬಳಿ ಕೇಂದ್ರದಲ್ಲಿ ಚಿಕಿತ್ಸಾ ಕೇಂದ್ರ ತೆರೆಯಿರಿ

ಅಧಿಕಾರಿಗಳ ಸಭೆಯಲ್ಲಿ ಶಾಸಕ ಡಿ.ಕೆ.ಶಿವಕುಮಾರ್‌ ಸಲಹೆ
Last Updated 12 ಮೇ 2021, 4:18 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಪರಿಸ್ಥಿತಿ ಕೈ ಮೀರುವ ಮೊದಲು ಸೋಂಕಿಗೆ ತಡೆಯೊಡ್ಡಬೇಕು. ಹೋಬಳಿ ಕೇಂದ್ರಗಳಲ್ಲಿ ಕೋವಿಡ್‌ ಆರೈಕೆ ಕೇಂದ್ರಗಳನ್ನು ಆರಂಭ ಮಾಡಬೇಕು ಎಂದು ಶಾಸಕ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ಬಗ್ಗೆ ಮಂಗಳವಾರ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ನಡೆಸಿದ ವರ್ಚುಯಲ್‌ ಸಭೆಯಲ್ಲಿ ಮಾತನಾಡಿದರು.

ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು ಸಾವು ನೋವುಗಳು ಹೆಚ್ಚಾಗುತ್ತಿವೆ. ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕು ಹೆಚ್ಚಾದ ಕಾರಣ ಮನೆಗಳಲ್ಲೇ ಸೋಂಕಿತರನ್ನು ಐಸೋಲೇಷನ್‌ ಮಾಡುತ್ತಿರುವುದರಿಂದ ಸೋಂಕು ಸುಲಭವಾಗಿ ಸಮುದಾಯಕ್ಕೆ ಹರಡುತ್ತಿದೆ ಎಂದು ದೂರಿದರು.

ಕೋವಿಡ್‌ ಸೋಂಕನ್ನು ನಿಯಂತ್ರಿಸಬೇಕಾದರೆ ಹೋಂ ಐಸೋಲೇಷನ್‌ ಬಿಟ್ಟು ಹೋಬಳಿ ಕೇಂದ್ರಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಕೇಂದ್ರ ಮಾಡಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಿ ಅವರ ಆರೈಕೆ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಸಲಹೆ ನೀಡಿದರು.

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲನೆ ಹಂತದ ಲಸಿಕೆಯನ್ನು ಪೂರ್ಣಗೊಳಿಸಿ 2ನೇ ಹಂತದ ಲಸಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಶೀಘ್ರವಾಗಿ ಪೂರ್ಣಗೊಳಿಸಬೇಕು. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುತ್ತಿದ್ದು ಆರೋಗ್ಯ ಸೇತು ಅರ್ಹ ಪ್ರತಿಯೊಬ್ಬರ ಹೆಸರನ್ನುನೋಂದಾಯಿಸಿ ಲಸಿಕೆಯನ್ನು ಕೊಡಿಸುವ ಮೂಲಕ ರಾಜ್ಯದಲ್ಲಿ ತಾಲ್ಲೂಕು ಪ್ರಥಮ ಸ್ಥಾನವಾಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಸದ ಡಿ.ಕೆ.ಸುರೇಶ್‌ ಮಾತನಾಡಿ, ತಾಲ್ಲೂಕಿನಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮೂವರ ಸಾವುಆತಂಕ ಹೆಚ್ಚಿಸಿದೆ. ತಾಲ್ಲೂಕು ಆಡಳಿತವು ಕೋವಿಡ್‌ನ್ನು ಗಂಭೀರವಾಗಿ ತೆಗೆದುಕೊಂಡು ಆರೋಗ್ಯ ಇಲಾಖೆ ಮತ್ತು ಪಂಚಾಯಿತಿಗಳೊಂದಿಗೆ ಸಮನ್ವಯ ಸಾಧಿಸಿ ಕೋವಿಡ್‌ ತಡೆಗೆ ಕ್ರಮ ರೂಪಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‌ ಮಾತನಾಡಿ, ತಾಲ್ಲೂಕಿನಲ್ಲಿ ಕೋವಿಡ್‌ ಸೋಂಕಿತರ ವಿವರ ಮತ್ತು ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್‌, ಉಪ ವಿಭಾಗಾಧಿಕಾರಿ ಮಂಜುನಾಥ್‌, ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌, ನಗರಸಭೆ ಅಧ್ಯಕ್ಷ ಮುಕ್ಬುಲ್‌ಪಾಷ, ಆಯುಕ್ತ ರಾಘವೇಂದ್ರ, ಟಿಎಚ್‌ಒ ಡಾ.ನಂದಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT