ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಮತ ಎಣಿಕೆಗೆ ಸಕಲ ಸಿದ್ಧತೆ

ಸೋಮವಾರ, ಜೂನ್ 17, 2019
25 °C
ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ಬೆಳಗ್ಗೆ 8ಕ್ಕೆ ಎಣಿಕೆ ಆರಂಭ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಮತ ಎಣಿಕೆಗೆ ಸಕಲ ಸಿದ್ಧತೆ

Published:
Updated:

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದೆ.

ಇಲ್ಲಿನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇದೇ 23 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಮೊದಲು ಸೇವಾ ಮತ್ತು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ಆ ನಂತರ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗಿರುವ ಮತ ಎಣಿಕೆ ನಡೆಯಲಿದೆ ಎಂದು ಗ್ರಾಮಾಂತರ ಕ್ಷೇತ್ರದ ಚುನಾವಣಾ ಅಧಿಕಾರಿ ಕೆ. ರಾಜೇಂದ್ರ ತಿಳಿಸಿದರು.

ಮತ ಎಣಿಕೆಗೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಪ್ರತ್ಯೇಕವಾಗಿ ಎಣಿಕೆ ಮಾಡಲು ವ್ಯವಸ್ಥೆಗೊಳಿಸಲಾಗಿದೆ. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ 19 ಸುತ್ತು, ರಾಜರಾಜೇಶ್ವರಿ ಕ್ಷೇತ್ರದಲ್ಲಿ 28 ಸುತ್ತು, ಬೆಂಗಳೂರು ದಕ್ಷಿಣದಲ್ಲಿ 25 ಸುತ್ತು, ಆನೇಕಲ್ 27 ಸುತ್ತು, ಮಾಗಡಿ 22 ಸುತ್ತು, ರಾಮನಗರ 20 ಸುತ್ತು, ಕನಕಪುರ 22 ಸುತ್ತು ಹಾಗೂ ಚನ್ನಪಟ್ಟಣ 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಕನಿಷ್ಠ 14 ಮೇಜುಗಳ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಮೇಜಿಗೆ ಮೇಲ್ವಿಚಾರಕರು, ಸಹಾಯಕ ಸಿಬ್ಬಂದಿ ಮತ್ತು ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅಭ್ಯರ್ಥಿಗಳು 14 ಮೇಜುಗಳಿಗೆ ತಲಾ ಒಬ್ಬ ಎಣಿಕೆ ಏಜೆಂಟರನ್ನು ನೇಮಿಸಲು ಅವಕಾಶ ನೀಡಲಾಗಿದೆ. ಎರಡು ಕೊಠಡಿಗಳಿರುವ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿ ಒಂದೊಂದು ಕೊಠಡಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.

ಮತ ಎಣಿಕೆಗೆ ವಿವಿಧ ಇಲಾಖೆಗಳಿಂದ ಒಂದು ಸಾವಿರಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ಅವರೆಲ್ಲರಿಗೂ ತರಬೇತಿ ನೀಡಲಾಗಿದೆ. ಮತ ಎಣಿಕೆಗೆ ಸಂಬಂಧಿಸಿದಂತೆ ಅಗತ್ಯವಿರುವ ಮೂಲ ಸೌಕರ್ಯ ಹಾಗೂ ಅಂತರ್ಜಾಲ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಳಿಗ್ಗೆ ಏಳು ಗಂಟೆಗೆ ಮತಯಂತ್ರಗಳಿರುವ ಕೊಠಡಿಗಳನ್ನು ತೆರೆಯಲಾಗುವುದು. ಅಭ್ಯರ್ಥಿಗಳ ಪರ ಏಜೆಂಟರು ಏಳು ಗಂಟೆಗೆ ಸರಿಯಾಗಿ ಆಗಮಿಸಿ ವರದಿ ಮಾಡಿಕೊಳ್ಳಬೇಕು ಎಂದರು.

ಮೊಬೈಲ್ ನಿಷೇಧ: ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ. ಸಂಪೂರ್ಣವಾಗಿ ಮತ ಎಣಿಕೆ ಕೇಂದ್ರ ಸಿಸಿಟಿವಿ ಮತ್ತು ಕ್ಯಾಮೆರಾಗಳಿಂದ ಆವೃತ್ತವಾಗಿದೆ. ಚುನಾವಣಾ ಸಿಬ್ಬಂದಿ ಸೇರಿದಂತೆ ಮತ ಎಣಿಕೆ ಕೇಂದ್ರಕ್ಕೆ ಬರುವವರು ಮೊಬೈಲ್ ಫೋನ್‍ ಗಳನ್ನು ತರುವಂತಿಲ್ಲ. ಜತೆಗೆ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ ಎಂದರು.

ಮಾಧ್ಯಮ ಕೇಂದ್ರ: ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದವರ ಅನುಕೂಲಕ್ಕೆ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ. ಪ್ರತಿ ಸುತ್ತಿನ ನಂತರ ಮಾಹಿತಿಯನ್ನು ಮಾಧ್ಯಮದವರಿಗೆ ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಮೂರು ಹಂತದ ಭದ್ರತೆ: ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಬಿ.ರಮೇಶ್ ಮಾತನಾಡಿ ‘ಎಣಿಕೆ ಕೇಂದ್ರಕ್ಕೆ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಪ್ರವೇಶ ದ್ವಾರದಲ್ಲಿ ಎಲ್ಲರನ್ನೂ ತಪಾಸಣೆಗೊಳಪಡಿಸಿ ಬಿಡಲಾಗುತ್ತದೆ. ಎರಡನೇ ಹಂತದಲ್ಲಿ ಮತ್ತೆ ತಪಾಸಣೆ ನಡೆಸಲಾಗುತ್ತದೆ. ಮೂರನೇ ಹಂತದಲ್ಲಿ ಎಣಿಕೆ ಕೇಂದ್ರವನ್ನು ಸಂಪೂರ್ಣವಾಗಿ ಅರೆಸೇನಾ ಪಡೆ ಸುಪರ್ದಿಗೆ ನೀಡಲಾಗಿದೆ. ಇದಕ್ಕಾಗಿ ಸಶಸ್ತ್ರ ಮೀಸಲು ಪಡೆಯ ಮೂರು ಕಂಪೆನಿಗಳನ್ನು ನಿಯೋಜಿಲಾಗುತ್ತಿದೆ ಎಂದು ತಿಳಿಸಿದರು.

ಅಧಿಕಾರಿಗಳು, ಎಣಿಕೆಗೆ ನಿಯೋಜಿಸಿರುವ ಸಿಬ್ಬಂದಿ, ಅಭ್ಯರ್ಥಿಗಳು, ಎಣಿಕೆ ಏಜೆಂಟರು ಸೇರಿದಂತೆ ಜಿಲ್ಲಾ ಚುನಾವಣಾಧಿಕಾರಿಯವರಿಂದ ಪಾಸ್ ಪಡೆದಿರುವವರಿಗೆ ಮಾತ್ರ ಎಣಿಕೆ ಕೇಂದ್ರದ ಒಳಗೆ ಪ್ರವೇಶ ನೀಡಲಾಗುತ್ತದೆ. ಮತ ಎಣಿಕೆ ಕಾರಣದಿಂದ ನಗರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಕ್ಷಿಪ್ರ ಕಾರ್ಯಾಚರಣೆ ಪಡೆ ತಂಡಗಳು, ರಾಜ್ಯ ಮೀಸಲು ಪೊಲೀಸ್ ಪಡೆ ಮತ್ತು ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಸಂಚಾರಿ ಗಸ್ತು ತಂಡಗಳನ್ನು ಸನ್ನದ್ಧವಾಗಿ ಇರಿಸಲಾಗಿದೆ. ಪರಿಸ್ಥಿತಿ ದುರ್ಬಳಕೆ ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು ಎಂದರು.

ಪ್ರತ್ಯೇಕ ನಿಲುಗಡೆ ವ್ಯವಸ್ಥೆ: ಎಣಿಕೆ ಕೇಂದ್ರದ ಬಳಿ ಸರ್ಕಾರಿ ಹಾಗೂ ಖಾಸಗಿ ವಾಹನಗಳಿಗೆ ಪ್ರತ್ಯೇಕ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿಯುತವಾಗಿ ಮತ ಎಣಿಕೆ ನಡೆಯಲು ಅನುಕೂಲವಾಗುವಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಇದ್ದರು.

ಅಂಕಿ–ಅಂಶ

15–ಚುನಾವಣಾ ಕಣದಲ್ಲಿ ಇರುವ ಒಟ್ಟು ಅಭ್ಯರ್ಥಿಗಳು
2672–ಕ್ಷೇತ್ರದಲ್ಲಿನ ಒಟ್ಟು ಮತಗಟ್ಟೆಗಳ ಸಂಖ್ಯೆ
3111–ಮತಯಂತ್ರಗಳ ಬಳಕೆ
3150–ಚುನಾವಣೆಗೆ ಬಳಸಲಾದ ವಿವಿಪ್ಯಾಟ್‌ಗಳು

ಮುಖ್ಯಾಂಶಗಳು

* ಒಂದು ಸಾವಿರ ಸಿಬ್ಬಂದಿ ನಿಯೋಜನೆ
* ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಟೇಬಲ್‌ಗಳಲ್ಲಿ ಎಣಿಕೆ
* ಮೂರು ಸುತ್ತುಗಳ ಭದ್ರತಾ ವ್ಯವಸ್ಥೆ

* ಗುರುವಾರ ಬೆಳಿಗ್ಗೆ 8ಕ್ಕೆ ಎಣಿಕೆ ಕಾರ್ಯ ಆರಂಭಿಸಲಾಗುವುದು, ವಿಧಾನಸಭಾ ಕ್ಷೇತ್ರವಾರು ವಿವಿಧ ಸುತ್ತುಗಳಲ್ಲಿ ಮತ ಎಣಿಕೆಯು ನಡೆಯಲಿದೆ
ಕೆ. ರಾಜೇಂದ್ರ, ಚುನಾವಣಾ ಅಧಿಕಾರಿ

* ಎಣಿಕೆ ಕೇಂದ್ರಕ್ಕೆ ಮೂರು ಸುತ್ತಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅಭ್ಯರ್ಥಿಗಳು, ಏಜೆಂಟರು, ಮಾಧ್ಯಮ ಹೊರತುಪಡಿಸಿ ಅನ್ಯರಿಗೆ ಪ್ರವೇಶವಿಲ್ಲ
–ಬಿ. ರಮೇಶ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !