ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಅಕ್ಕಿ ನಾಪತ್ತೆ ಪ್ರಕರಣ: ರೈತ ಸಂಘದಿಂದ ಪ್ರತಿಭಟನೆ

Published 25 ನವೆಂಬರ್ 2023, 8:47 IST
Last Updated 25 ನವೆಂಬರ್ 2023, 8:47 IST
ಅಕ್ಷರ ಗಾತ್ರ

ಚನ್ನಪಟ್ಟಣ: ನಗರದ ಟಿಎಪಿಸಿಎಂಎಸ್ ಗೋದಾಮಿನಿಂದ ಅಕ್ಕಿ ನಾಪತ್ತೆಯಾಗಿರುವ ಪ್ರಕರಣವೂ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಡವರಿಗೆ ಹಂಚಲು ಸಂಗ್ರಹಿಸಿದ್ದ ಟಿಎಪಿಸಿಎಂಎಸ್ ಗೋದಾಮಿನಿಂದ ಸುಮಾರು 3,200 ಚೀಲಗಳಲ್ಲಿದ್ದ ಅಂದಾಜು ₹ 52 ಲಕ್ಷ ಮೌಲ್ಯದ 1,600 ಕ್ವಿಂಟಲ್ ಅಕ್ಕಿ ಹಾಗೂ ರಾಗಿ ನಾಪತ್ತೆಯಾಗಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕಂದಾಯ ಇಲಾಖೆ, ನೋಂದಣಿ ಇಲಾಖೆ, ರೇಷ್ಮೆ, ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಸಮಗ್ರ ತನಿಖೆ ನಡೆಸಬೇಕು. ತಾಲ್ಲೂಕಿನ ಬಹುತೇಕ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಈ ಎಲ್ಲಾ ಇಲಾಖೆಗಳಲ್ಲಿ ನಡೆದಿರುವ ಹಗರಣಗಳಲ್ಲಿ ಭಾಗಿಯಾಗಿರುವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಂದಾಯ ಇಲಾಖೆಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಲಾಖೆ 8 ಸಿಬ್ಬಂದಿ ಪ್ರಕರಣ ಎದುರಿಸುತ್ತಿದ್ದಾರೆ. ರೇಷ್ಮೆ ಇಲಾಖೆಯ ಸಿಬ್ಬಂದಿ ಲಂಚ ಪಡೆದ ಆಪಾದನೆಯ ಮೇಲೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ನೋಂದಣಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಎಫ್ಐಆರ್‌ ದಾಖಲಾಗಿದೆ. ಗಣಿ ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇಂತಹ ವೇಳೆ ಸುಮಾರು 1,600 ಕ್ವಿಂಟಲ್ ಅಕ್ಕಿ ಗೋದಾಮಿನಿಂದ ಕಾಣೆಯಾಗಿದೆ. ಇದು ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮುಗಿಲುಮುಟ್ಟಿದೆ. ಇದರ ಜೊತಗೆ ಸರ್ಕಾರದ ಆಸ್ತಿಪಾಸ್ತಿಯ ಲೂಟಿಯಾಗುತ್ತದೆ. ಸರ್ಕಾರ ಈ ಕೂಡಲೇ ತಾಲ್ಲೂಕಿನಲ್ಲಿ ನಡೆದಿರುವ ಹಗರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ತಾಲ್ಲೂಕಿನ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷಗಳಿಂದ ಬೀಡುಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಇದರ ಜತೆಗೆ ನಿಷ್ಕ್ರಿಯವಾಗಿರುವ ತಾಲೂಕು ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಿ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ನಂತರ ತಹಶೀಲ್ದಾರ್ ಮಹೇಂದ್ರ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ತಿಮ್ಮೇಗೌಡ, ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೃಷ್ಣಯ್ಯ, ಜಿಲ್ಲಾ ಉಪಾಧ್ಯಕ್ಷ ಕೆ.ಎನ್.ರಾಜು, ತಾಲ್ಲೂಕು ಘಟಕದ ಅಧ್ಯಕ್ಷ ರಾಮೇಗೌಡ, ಪದಾಧಿಕಾರಿಗಳಾದ ರವಿಕುಮಾರ್, ಗೋಪಾಲ್, ರವಿ, ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT