ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ ಪರೀಕ್ಷೆಗೆ ಸಿದ್ಧತೆ ಪೂರ್ಣ

ಕೋವಿಡ್‌ ಸೋಂಕಿತರು, ರೋಗ ಲಕ್ಷಣ ಉಳ್ಳವರಿಗೂ ಪರೀಕ್ಷೆ ಬರೆಯುವ ಅವಕಾಶ
Last Updated 29 ಜುಲೈ 2020, 17:02 IST
ಅಕ್ಷರ ಗಾತ್ರ

ರಾಮನಗರ: ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಇದೇ 30 ಹಾಗೂ 31ರಂದು ನಡೆಯಲಿದೆ. ಜಿಲ್ಲೆಯ 6 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೋವಿಡ್‌ ಸೋಂಕಿನ ಭೀತಿಯ ನಡುವೆಯೂ ಪದವಿಪೂರ್ವ ಶಿಕ್ಷಣ ಇಲಾಖೆಯು ಈ ಪರೀಕ್ಷೆ ಸಂಘಟಿಸುತ್ತಿದೆ. ಕೋವಿಡ್‌ ಪಾಸಿಟಿ‌ವ್‌ ಇರುವ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸುತ್ತಿರುವುದು ಈ ಬಾರಿಯ ವಿಶೇಷ. ಯಾವ ವಿದ್ಯಾರ್ಥಿಯೂ ಸಿಇಟಿ ಬರೆಯುವ ಅವಕಾಶದಿಂದ ವಂಚಿತ ಆಗಬಾರದು ಎಂಬ ಕಾರಣಕ್ಕೆ ಇಲಾಖೆಯು ಅವರಿಗೆ ಈ ಅವಕಾಶ ಕಲ್ಪಿಸಿದೆ. ಇಂತಹವರಿಗೆಂದೇ ಪ್ರತ್ಯೇಕ ಪರೀಕ್ಷಾ ಕೇಂದ್ರದ ವ್ಯವಸ್ಥೆಯನ್ನೂ ಮಾಡಲಾಗಿದೆ. ರಾಮನಗರದ ಆಗಾ ಲೇಔಟ್‌ನಲ್ಲಿರುವ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಸದ್ಯದ ಮಟ್ಟಿಗೆ ಯಾವ ಅಭ್ಯರ್ಥಿಯೂ ಕೋವಿಡ್‌ ಸೋಂಕಿಗೆ ಒಳಗಾಗಿಲ್ಲ. ಒಂದು ವೇಳೆ ಅಂತಹವರು ಕಂಡುಬಂದರೂ ಹೆದರದೇ ಪರೀಕ್ಷೆ ಬರೆಯಬಹುದಾಗಿದೆ. ಇದಕ್ಕಾಗಿ ಪ್ರತ್ಯೇಕ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ಸಹ ಲಭ್ಯವಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಸವಿತಾ ತಿಳಿಸಿದರು.

ಆರೋಗ್ಯ ತಪಾಸಣೆ: ಮೊದಲ ದಿನದಂದು ಜೀವವಿಜ್ಞಾನ, ಗಣಿತ ಹಾಗೂ ಎರಡನೇ ದಿನದಂದು ಭೌತವಿಜ್ಞಾನ ಹಾಗೂ ರಸಾಯನವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10.30ಕ್ಕೆ ಪರೀಕ್ಷೆಗಳು ಆರಂಭಗೊಳ್ಳಲಿವೆಯಾದರೂ ಎರಡು ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಗಳತ್ತ ಬರುವಂತೆ ಅಭ್ಯರ್ಥಿಗಳಿಗೆ ಸೂಚಿಸಿದೆ.

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ತಲಾ 200 ಅಭ್ಯರ್ಥಿಗಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರತಿ ಕೇಂದ್ರದ ಪ್ರವೇಶ ದ್ವಾರದಲ್ಲಿ ಪ್ರತಿ ಅಭ್ಯರ್ಥಿಯ ದೇಹದ ಉಷ್ಣತೆಯ ಪ್ರಮಾಣವನ್ನು ತಪಾಸಣೆ ನಡೆಸಿ, ಕೈಗೆ ಸ್ಯಾನಿಟೈಸರ್‌ ಹಾಕಿ ಒಳಗೆ ಬಿಡಲಿದ್ದಾರೆ. ಪ್ರತಿ ವಿದ್ಯಾರ್ಥಿಯೂ ಮಾಸ್ಕ್‌ ಬಳಸವುದು ಕಡ್ಡಾಯವಾಗಿದೆ. ಒಂದು ವೇಳೆ ಅಭ್ಯರ್ಥಿಗಳು ಮಾಸ್ಕ್‌ ಹೊಂದಿರದಿದ್ದಲ್ಲಿ ಪರೀಕ್ಷಾ ಕೇಂದ್ರದಲ್ಲಿನ ಸಿಬ್ಬಂದಿಯೇ ಮಾಸ್ಕ್‌ ನೀಡಲಿದ್ದಾರೆ.

ವಿಶೇಷ ಕೊಠಡಿ: ಪ್ರವೇಶ ದ್ವಾರದಲ್ಲಿನ ತಪಾಸಣೆಯ ಸಂದರ್ಭ ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಜ್ವರ, ಅಧಿಕ ಉಷ್ಣತೆ ಮೊದಲಾದ ಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಸಹ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಕಂಟೈನ್‌ಮೆಂಟ್‌ ವಲಯಗಳಿಂದ ಬರುವ ಅಭ್ಯರ್ಥಿಗಳಿಗೆಂದೇ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸದ್ಯ ಅಂತಹ ಯಾವುದೇ ಅಭ್ಯರ್ಥಿ ಇಲ್ಲ ಎನ್ನುತ್ತಾರೆ ಅಧಿಕಾರಿಗಳು.

ತಂಡ ರಚನೆ: ಪರೀಕ್ಷೆ ಸುಗಮವಾಗಿ ನಡೆಯಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಂಡಿವೆ. ಪ್ರತಿ ಪರೀಕ್ಷಾ ಕೇಂದ್ರವನ್ನೂ ಈಗಾಗಲೇ ಸ್ಯಾನಿಟೈಸ್‌ ಮಾಡಲಾಗಿದೆ. ಪ್ರತಿ ಪರೀಕ್ಷೆ ಮುಕ್ತಾಯದ ಬಳಿಕ ಇನ್ನೊಂದು ಪರೀಕ್ಷೆ ಆರಂಭಕ್ಕೆ ಮುನ್ನ ಕೊಠಡಿಗಳು, ಡೆಸ್ಕ್‌ಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಪ್ರತಿ ಕೇಂದ್ರಕ್ಕೆ ಪ್ರತ್ಯೇಕ ಜಾಗೃತ ದಳ, ಕಸ್ಟೋಡಿಯನ್‌ ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಓಡಾಟ: ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳುವ ಸಮಯದಲ್ಲಿ ಬಸ್‌ ಸೌಲಭ್ಯ ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಜಿಲ್ಲೆಯ ಆಯ್ದ ಭಾಗಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳು

ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಕನಕಪುರದ ಎಕ್ಸ್‌ ಮುನ್ಸಿಪಲ್‌ ಸರ್ಕಾರಿ ಪಿಯು ಕಾಲೇಜು ಹಾಗೂ ರಾಮನಗರದ ಬಿಜಿಎಸ್ ಪಿಯು ಕಾಲೇಜು, ಯುನಿವರ್ಸಲ್‌ ಪಿಯು ಕಾಲೇಜು, ಶಾಂತಿನಿಕೇತನ ಪಿಯು ಕಾಲೇಜು ಹಾಗೂ ಗೌರಮ್ಮ ಸ್ಮಾರಕ ಪಿಯು ಕಾಲೇಜು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT