ಕಂಚುಗಾರನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಸುಧಾ ಆಯ್ಕೆ

ಬಿಡದಿ: ಕೋರಂ ಕೊರತೆಯಿಂದ ಮುಂದೂಡಲಾಗಿದ್ದ ತಾಲ್ಲೂಕಿನ ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ಸುಧಾ ದೇವರಾಜು ಮತ್ತು ಉಪಾಧ್ಯಕ್ಷೆಯಾಗಿ ಪದ್ಮಾ ಶಿವಕುಮಾರ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
17 ಸದಸ್ಯರಿರುವ ಗ್ರಾ.ಪಂ.ನಲ್ಲಿ 11 ಜೆಡಿಎಸ್ ಬೆಂಬಲಿತರು ಮತ್ತು 6 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಫೆ. 12ರಂದು ಚುನಾವಣೆ ನಿಗದಿಯಾಗಿತ್ತು. ಆದರೆ, ಜೆಡಿಎಸ್ ಬೆಂಬಲಿತ ಸದಸ್ಯರು ಮೀಸಲಾತಿ ನಿಗದಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಚುನಾವಣಾ ಪ್ರಕ್ರಿಯೆಯಿದ ದೂರ ಉಳಿದಿದ್ದರು. ಹಾಗಾಗಿ, ಚುನಾವಣೆಯನ್ನು ಮುಂದೂಡಲಾಗಿತ್ತು.
ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸುಧಾ ದೇವರಾಜು ನಾಮಪತ್ರ ಸಲ್ಲಿಸಿದ್ದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾ ಶಿವಕುಮಾರ್ ಮತ್ತು ವಸಂತ ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ವಸಂತ ನಾಮಪತ್ರ ವಾಪಸ್ ಪಡೆದರು. ಹಾಗಾಗಿ, ಅವಿರೋಧ ಆಯ್ಕೆ ನಡೆಯಿತು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರ್ ಚುನಾವಣಾಧಿಕಾರಿಯಾಗಿದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಪಿಡಿಒ ಮಂಜುನಾಥ್, ಕಾರ್ಯದರ್ಶಿ ದೇವರಾಜು ಕಾರ್ಯ ನಿರ್ವಹಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.