ಬುಧವಾರ, ಡಿಸೆಂಬರ್ 8, 2021
28 °C
ಜಿಲ್ಲಾ, ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ

‘ಇಡೀ ಸಮಾಜಕ್ಕೆ ಗುರು ಮಾದರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: "ಉತ್ತಮ ಸಮಾಜ ನಿರ್ಮಾಣದಲ್ಲಿ ಗುರುವಿನ ಪಾತ್ರ ಪ್ರಮುಖವಾದುದು. ಶಿಕ್ಷಕರು ಅದನ್ನು ಅರಿತು ಮಕ್ಕಳನ್ನು ಉತ್ತಮ ರೀತಿಯಲ್ಲಿ ರೂಪಿಸುವ ಅಗತ್ಯವಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಯ್ಯ ಹೇಳಿದರು.

ನಗರದ ಗುರುಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶನಿವಾರ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಂಜಿನಿಯರ್ ತಪ್ಪು ಮಾಡಿದರೆ ಒಂದು ಕಟ್ಟಡ ಹಾಳಾದಂತೆ. ವೈದ್ಯ ನಿರ್ಲಕ್ಷ್ಯ ಮಾಡಿದರೆ ರೋಗಿ ಹಾಳಾದಂತೆ. ಆದರೆ, ಒಬ್ಬ ಶಿಕ್ಷಕ ತಪ್ಪು ಮಾಡಿದರೆ ಇಡೀ ಸಮಾಜವೇ ಹಾಳಾದಂತೆ. ಈ ನಿಟ್ಟಿನಲ್ಲಿ ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದುದ್ದು, ಜವಾಬ್ದಾರಿಯುತವಾದುದು ಎಂದು ಹೇಳುತ್ತಾರೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಂಡು ಅತ್ಯಂತ ಹೊಣೆಗಾರಿಕೆಯಿಂದ ಕರ್ತವ್ಯ ನಿಭಾಯಿಸಬೇಕಾದ ಸವಾಲು ಶಿಕ್ಷಕರ ಮುಂದಿದೆ ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಗಾಣಕಲ್ ನಟರಾಜು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇಂದಿಗೂ ಶಿಕ್ಷಕರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾರೆ. ಎಲ್ಲೋ ಒಂದೆರಡು ಅಪವಾದಗಳನ್ನು ಹೊರತುಪಡಿಸಿದರೆ, ಶಿಕ್ಷಕ ಸಮುದಾಯ ವೃತ್ತಿಯಲ್ಲಿ ಅರ್ಪಣಾಭಾವ ಹೊಂದುವ ಮೂಲಕ ಇಂದಿಗೂ ತನ್ನದೇ ಆದ ಘನತೆಯನ್ನು ಉಳಿಸಿಕೊಂಡಿದೆ. ನಾನೂ ಒಬ್ಬ ಶಿಕ್ಷಕರ ಮಗ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ತಮ್ಮ ವೈಯಕ್ತಿಕ ಸಮಸ್ಯೆಗಳ ನಡುವೆಯೂ ತಮ್ಮ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಅವಿತರತವಾಗಿ ಶ್ರಮಿಸುತ್ತಿರುವ ಶಿಕ್ಷಕ ವೃಂದಕ್ಕೆ ಕೋಟಿ ವಂದನೆಗಳು ಎಂದು ಗೌರವ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ 2020-21ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರು, ನಿವೃತ್ತ ಶಿಕ್ಷಕರನ್ನು ಗಣ್ಯರು ಪೇಟ ತೊಡಿಸಿ, ಶಾಲು ಹೊದಿಸಿ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪುರುಷ್ಕೃತರ ಪರವಾಗಿ ಮಾತನಾಡಿದ ಚನ್ನಪಟ್ಟಣ ತಾಲ್ಲೂಕು ಇಗ್ಗಲೂರು ಪ್ರೌಢಶಾಲೆಯ ಕನ್ನಡ ಶಿಕ್ಷಕ ಹರೂರು ಚಂದ್ರಶೇಖರ್ "ನಾವು ಮಾಡುವ ಅಳಿಲು ಸೇವೆಯನ್ನು ಗುರುತಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೌರವಿಸಿದ ಇಲಾಖೆ ಹಾಗೂ ಅಧಿಕಾರಿಗಳಿಗೆ ಧನ್ಯವಾದ. ಈ ಗೌರವವು ಒಬ್ಬ ಶಿಕ್ಷಕನಾಗಿ ನಾನು ಇನ್ನೂ ಹೆಚ್ಚಿನ ಜವಾಬ್ದಾರಿ ಹಾಗೂ ಅರ್ಪಣಾ ಭಾವದಿಂದ ನನ್ನ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ಸೂಚ್ಯವಾಗಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡಲು ಬದ್ಧನಾಗಿದ್ದೇನೆ’ ಎಂದು ವಾಗ್ದಾನ ಮಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಭದ್ರಯ್ಯ, ಇಒ ಶಿವಕುಮಾರ್, ಬಿಇಒ ಮರೀಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೆ. ಬೈರಲಿಂಗಯ್ಯ, ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು