ಸೋಮವಾರ, ಅಕ್ಟೋಬರ್ 26, 2020
21 °C
ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಕಾರಿಗಳಿಂದ ಸರ್ಕಾರಕ್ಕೆ ಮನವಿ

ಕನ್ನಡ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲೆ-ಕಾಲೇಜುಗಳಿಗೆ ಅನುದಾನ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ರಾಜ್ಯ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಹೋರಾಟ ಸಮನ್ವಯ ಸಮಿತಿಗಳ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಒಕ್ಕೂಟದ ರಾಜ್ಯ ಮಹಾಪೋಷಕ ಜಾಲಮಂಗಲ ನಾಗರಾಜ್ ಮಾತನಾಡಿ "ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2006-07 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1987ರಿಂದ 1994 ವರೆಗಿನ ಅವಧಿಯಲ್ಲಿ ಪ್ರಾರಂಭವಾಗಿದ್ದ ಖಾಸಗಿ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷಕ ಕುಟುಂಬಗಳಿಗೆ ಹೊಸ ಬದುಕು ನೀಡಿರುವುದನ್ನು ಶಿಕ್ಷಕ ಬಳಗ ಎಂದಿಗೂ ಮರೆಯಲಾರದು. ಆದರೆ, ತಾವೇ ಅಧಿಕಾರದ ಚುಕ್ಕಾಣಿ ಹಿಡಿದಿರುವ ಈ ಸಂದರ್ಭದಲ್ಲಿ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಲ್ಲಿ ದುಡಿಯುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ಯಾವುದೇ ಭವಿಷ್ಯದ ಭರವಸೆ ಇಲ್ಲದಂತಾಗಿದೆ" ಎಂದು ಕಳವಳ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಾಲಾ-ಕಾಲೇಜುಗಳಿಗೆ ಅನುದಾನ ನೀಡುವ ಮೂಲಕ ಮಾತೃಭಾಷೆಯ ಉಳಿವಿಗಾಗಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಭರವಸೆಯ ಬೆಳಕಾಗಬೇಕು. ಈ ಸಂಬಂಧ ಕಳೆದೊಂದು ದಶಕದಿಂದಲೂ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಕಳೆದ ವರ್ಷ ವಿವಿಧ ರೀತಿಯಲ್ಲಿ ದೊಡ್ಡಮಟ್ಟದ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ರಾಜಧಾನಿಯಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಅದಕ್ಕೂ ಬಗ್ಗದಿದ್ದಲ್ಲಿ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಸಾಮೂಹಿಕ ಆತ್ಮಹತ್ಯೆಯಂತಹ ದಾರಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜವರೇಗೌಡ ಮಾತನಾಡಿ, ಸರ್ಕಾರದ ನಿರ್ಲಕ್ಷ್ಯ ಧೋರಣೆ ಮತ್ತು ಕೊರೊನಾ ಸಂಕಷ್ಟದ ನಡುವೆ 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ, ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಸಿಬ್ಬಂದಿ ಅರೆಹೊಟ್ಟೆಯಲ್ಲಿ ಜೀವನ ಸಾಗಿಸುತ್ತಿದ್ದೇವೆ. ನಮಗೆ ಬೇರೆ ಯಾವುದೇ ಆದಾಯದ ಮೂಲವಾಗಲಿ, ಕಸುಬುಗಳಾಗಲಿ ಗೊತ್ತಿರದ ಕಾರಣ, ಶಿಕ್ಷಣ ಸಂಸ್ಥೆಗಳನ್ನೇ ನಂಬಿ ಬದುಕುತ್ತಿದ್ದೇವೆ. ನಮ್ಮೆಲ್ಲರ ಬದುಕು ಬೀಳುವ ಮುನ್ನವೇ ಎಚ್ಚರಿಕೆ ವಹಿಸಿ ರಾಜ್ಯ ಸರ್ಕಾರ, ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ನಮ್ಮ ಕುಟುಂಬಗಳನ್ನು ಉಳಿಸಬೇಕು ಎಂದು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿ ಬಿ.ಎಸ್.ವೆಂಕಟಾ ಚಲಪತಿ ಅವರಿಗೆ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಅರ್ಪಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುತ್ತುಸ್ವಾಮಿ, ಸಂಘಟನಾ ಕಾರ್ಯದರ್ಶಿ ಶಿವಮಾದು, ಖಜಾಂಚಿ ಬಿ.ಕುಳ್ಳೇಗೌಡ, ರಾಮನಗರ ತಾಲ್ಲೂಕು ಅಧ್ಯಕ್ಷ ರವಿಗೌಡ, ಪದಾಧಿಕಾರಿಗಳಾದ ಸ್ವಾಮಿಗೌಡ, ಸಾವಿತ್ರಮ್ಮ, ಭಾರತಿ, ವರಲಕ್ಷ್ಮೀ, ಕೀರ್ತಿರಾಜ್, ಸಿದ್ದರಾಜು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಬೇಡಿಕೆಗಳು

ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು
ಕಾಲ್ಪನಿಕ ವೇತನ ಬಡ್ತಿ ನೀಡುವ ನಿಟ್ಟಿನಲ್ಲಿ ಬಸವರಾಜ ಹೊರಟ್ಟಿ ವರದಿ ಜಾರಿಗೊಳಿಸಬೇಕು
ಜ್ಯೋತಿ ಸಂಜೀವಿನಿಯನ್ನು ಎಲ್ಲ ಸಿಬ್ಬಂದಿಗೂ ವಿಸ್ತರಿಸಬೇಕು
ಖಾಲಿ ಹುದ್ದೆಗಳ ಭರ್ತಿಗೆ ವಿಧಿಸಿರುವ ಆರ್ಥಿಕ ಮಿತವ್ಯಯವನ್ನು ಹಿಂಪಡೆಯಬೇಕು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು