ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರು ಕೌಶಲಾಭಿವೃದ್ಧಿ ತರಬೇತಿ ಪಡೆಯಿರಿ- ಅನಿತಾ ಕುಮಾರಸ್ವಾಮಿ

ಜಿಲ್ಲಾ ಪಂಚಾಯಿತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
Last Updated 9 ಮಾರ್ಚ್ 2022, 6:41 IST
ಅಕ್ಷರ ಗಾತ್ರ

ರಾಮನಗರ: ಮಹಿಳೆಯರು ಸಾಮಾಜಿಕ ಚಟುವಟಿಕೆಯಲ್ಲಿ ಭಾಗಿಯಾಗುವ ಮೂಲಕ ಮುಖ್ಯವಾಹಿನಿಗೆ ಬರಬೇಕು. ಸದೃಢ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಂಜೀವಿನಿ-ಜೀವನೋಪಾಯ ಅಭಿಯಾನ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಮಹಿಳೆಯರು ನಿರುದ್ಯೋಗದ ಸಮಸ್ಯೆಯನ್ನು ಅನುಭವಿಸುತ್ತಿದ್ದರು. ಈಗ ವಿವಿಧ ರೀತಿಯ ಮಹಿಳಾ ಹಾಗೂ ಸ್ವಸಹಾಯ ಸಂಘಗಳು ಅಸ್ತಿತ್ವದಲ್ಲಿದ್ದು, ಇದರಿಂದ ಆರ್ಥಿಕ ಸದೃಢರಾಗಿ ಜೀವನ ಸುಧಾರಣೆಯಾಗುತ್ತಿದೆ ಎಂದರು.

ಗ್ರಾಮೀಣ ಮಹಿಳೆಯರು ಕೌಶಲಾಭಿವೃದ್ಧಿ ತರಬೇತಿಗಳನ್ನು ಪಡೆದುಕೊಳ್ಳಬೇಕು. ಬ್ಯೂಟಿಷಿಯನ್ ಕೋರ್ಸ್‍ಗಳು, ಇವೆಂಟ್ ಮ್ಯಾನೇಜ್‌ ಮೆಂಟ್ ಸೇರಿದಂತೆ ಉದ್ಯೋಗ ಕಲ್ಪಿಸುವ ಹಲವಾರು ಕ್ಷೇತ್ರಗಳಿವೆ. ತರಬೇತಿ ಬಗ್ಗೆ ಮಾಹಿತಿ ಪಡೆದುಕೊಂಡು ಹೆಚ್ಚಿನ ಉದ್ಯೋಗ ಬೇಡಿಕೆ ಇರುವ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕು. ವಿವಿಧ ಕ್ಷೇತ್ರಗಳಲ್ಲಿ ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ರಂಗದಲ್ಲೂ ಪಾಲ್ಗೊಂಡು ಸಾಧಕಿಯರಾಗಿ ಮೆರೆಯುತ್ತಿದ್ದಾರೆ. ವಿಮಾನ ಚಾಲನೆಯಿಂದ ಹಿಡಿದು ಆಟೊ ಚಾಲನೆವರೆಗೆ ವಿವಿಧ ವೃತ್ತಿಯಲ್ಲಿ ತೊಡಗಿದ್ದಾರೆ. ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಯೋಜನೆಯಡಿ ಮಹಿಳೆಯರಿಗೆ ಸಿಗುವ ಸೌಲಭ್ಯ, ತರಬೇತಿಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ, ಉಪ ಕಾರ್ಯದರ್ಶಿ ರಮೇಶ್, ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ವಿವಿಧ ಸ್ವಸಹಾಯ ಗುಂಪುಗಳ ಮಹಿಳೆಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT