ಎಚ್‌ಡಿಕೆ ದಂಪತಿಯಿಂದ ಹಸುಗಳಿಗೆ ಪೂಜೆ

ಬಿಡದಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹೋಬಳಿಯ ಕೇತಗಾನಹಳ್ಳಿ ತೋಟದಲ್ಲಿ ಗೋಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಕುಮಾರಸ್ವಾಮಿ, ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿಯು ಶ್ರೀಕೃಷ್ಣ ಪರಮಾತ್ಮ ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋವುಗಳ ಸಮೂಹ ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋಪೂಜೆ ಮತ್ತು ಗೋವರ್ಧನ ಪೂಜೆ ಆಚರಿಸಲಾಗುತ್ತದೆ. ಕೆಲವೆಡೆ ರೈತರು ಇದನ್ನು ಹಟ್ಟಿ ಹಬ್ಬವೆಂದು ಆಚರಿಸುತ್ತಾರೆ ಎಂದರು.
‘ಬೆಳಕಿನ ಹಬ್ಬ ದೀಪಾವಳಿ ವೇಳೆ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋಪೂಜೆ ನೆರವೇರಿಸಲಾಯಿತು’ ಎಂದು ತಿಳಿಸಿದರು.
‘ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸುಡುವ ಸಮಯದಲ್ಲಿ ಕೆಲವರು ದೃಷ್ಟಿಗೆ ಹಾನಿ ಮಾಡಿಕೊಂಡಿರುವ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾರೂ ಕೂಡ ಈ ಎಚ್ಚರ ತಪ್ಪಬಾರದು. ಮಕ್ಕಳ ಬಗ್ಗೆ ಪೋಷಕರು ಗಮನ ಇಟ್ಟಿರಬೇಕು. ಇನ್ನೂ ಮಕ್ಕಳಿಗೆ ಕೋವಿಡ್ ಲಸಿಕೆ ಬಂದಿಲ್ಲ ಎನ್ನುವುದನ್ನು ಮರೆಯಬಾರದು’ ಎಂದು ಕಿವಿಮಾತು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.