ಮಂಗಳವಾರ, ಮೇ 17, 2022
27 °C

ಪೆಟ್ರೋಲ್ ‘100 ನಾಟೌಟ್’: ಇಂಧನ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಇಲ್ಲಿನ ಮೈಸೂರು ರಸ್ತೆಯ ಸೂರಿ ಪೆಟ್ರೋಲ್‌ ಬಂಕ್‌ ಮುಂಭಾಗ ಭಾನುವಾರ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ಖಂಡಿಸಿ ಭಾನುವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್‌ ‘100 ನಾಟೌಟ್‌’ ಪ್ರದರ್ಶನ ನಡೆಸಿದ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ದರ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಘೋಷಣೆ ಕೂಗಿದರು.

ಯೂತ್‌ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಮಾತನಾಡಿ, ಕೊರೊನಾ ಸೋಂಕಿನ ಕಾರಣದಿಂದ ದೇಶದೆಲ್ಲೆಡೆ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಇದರಿಂದ ಜನರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ಜೀವನ ನಿರ್ವಹಣೆ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ ₹ 100 ಗಡಿ ದಾಟಿದೆ. ಇಂದು ವಾಹನಗಳಿಲ್ಲದೆ ಜನರ ಜೀವನವೇ ನಡೆಯುವುದಿಲ್ಲ. ತಮಗೆ ಸಂಪಾದನೆ ಇರಲಿ, ಇಲ್ಲದಿರಲಿ ಪ್ರತಿ ವ್ಯಕ್ತಿಯೂ ವಾಹನಗಳ ಮೇಲೆ ಅವಲಂಬಿತನಾಗಿದ್ದಾನೆ. ಒಂದೂವರೆ ವರ್ಷದಿಂದ ಕೋವಿಡ್‌ ಸಂಕಷ್ಟದಲ್ಲೇ ಜನರು ಜೀವನ ದೂಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲೂ ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಬೆಲೆ ಏರಿಕೆ ನಾಗಾಲೋಟದಲ್ಲಿ ಸಾಗುತ್ತಿದೆ ಎಂದು ದೂರಿದರು.

ಯೂತ್‌ ಕಾಂಗ್ರೆಸ್‌ ತಾಲ್ಲೂಕು ಘಟಕದ ಅಧ್ಯಕ್ಷ ದೀಪು ಮಾತನಾಡಿ, ಕಾಂಗ್ರೆಸ್‌ ಸರ್ಕಾರದಲ್ಲಿ ಪೆಟ್ರೋಲ್‌ ಬೆಲೆ ₹ 60ರಿಂದ ₹ 65 ಆಸುಪಾಸಿನಲ್ಲಿತ್ತು. ಆದರೂ ಅಂದು ಮಹಿಳಾ ಪದಾಧಿಕಾರಿಗಳು ಸೇರಿದಂತೆ ಬಿಜೆಪಿಯವರು ಬೀದಿಗಿಳಿದು ಹೋರಾಟ ನಡೆಸಿದ್ದರು. ಪ್ರತಿಭಟನೆ ಮಾಡಿ ತೈಲ ಬೆಲೆ ಇಳಿಸುವಂತೆ ಒತ್ತಾಯಿಸಿದ್ದರು. ಈಗ ₹ 100ರ ಗಡಿ ದಾಟಿದ್ದರೂ ಯಾರೊಬ್ಬರು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಕಿಡಿಕಾರಿದರು.

ದೇಶದ ಜನರನ್ನು ಮರುಳು ಮಾಡಿ ಅಚ್ಛೇದಿನಗಳು ಬರುತ್ತವೆ ಎಂದು ಮೋದಿ ಹೇಳುತ್ತಿದ್ದರು. ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಯಾವುದು ಜನಸಾಮಾನ್ಯರಿಗೆ ಹೊರೆ ಆಗುತ್ತದೊ ಅಂತಹದ್ದನ್ನು ಸರ್ಕಾರ ಕೂಡಲೇ ಹಿಂಪಡೆದು ಜನರ ಪರವಾಗಿ ನಿಲ್ಲಬೇಕು. ಇಲ್ಲವಾದರೆ ಉಗ್ರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಆಗ್ರಹಿಸಿದರು.

ಯುವ ಕಾಂಗ್ರೆಸ್‌ ಪದಾಧಿಕಾರಿಗಳಾದ ವಿನೋದ್‌, ಕಿರಣ್‌, ಶಿವು, ಮಂಜು, ಪುಟ್ಟರಾಜು, ಹೇಮಚಂದ್ರ, ಶ್ರೀಧರ್‌, ರಿಜ್ವಾನ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.