ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ತಾಕೀತು

ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
Last Updated 13 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ರಾಮನಗರ: ಗ್ರಾಮೀಣ ಪ್ರದೇಶದ ಹಲವು ಅಂಗಡಿಗಳಲ್ಲಿ ಮದ್ಯ ಮಾರಾಟ ಜೋರಾಗಿದೆ. ಇದನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಪ್ರಯೋಜನ ಆಗಿಲ್ಲ ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಂಕರ್ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಅಬಕಾರಿ ಇಲಾಖೆಯವರು ಪಾರದರ್ಶಕವಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮಗಳಲ್ಲಿ ಮಹಿಳೆಯರ ಬಳಿ ವಿಚಾರಿಸಿದರೆ ಮದ್ಯ ಮಾರಾಟ ಎಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡುತ್ತಾರೆ ಎಂದರು.

ಅಧಿಕಾರಿಗಳು ಈಗಲಾದರೂ ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಿ, ಮಾರಾಟಗಾರರ ವಿರುದ್ಧ ಪ್ರಕರಣ ದಾಖಲಿಸಬೇಕು. ಅಕ್ರಮವಾಗಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವುದಾದರೆ, ಮದ್ಯದ ಅಂಗಡಿಗಳನ್ನು ನಡೆಸಲು ಪರವಾನಗಿಯನ್ನು ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಅಬಕಾರಿ ಇಲಾಖೆಯವರು ಪೊಲೀಸ್ ಇಲಾಖೆಯ ಸಹಕಾರ ಪಡೆದು ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

‘ಕಳೆದ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಜಿಲ್ಲೆಯಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿ 301 ಹಾಗೂ 24 ಘೋರ ಪ್ರಕರಣಗಳನ್ನು ದಾಖಲಿಸಲಾಗಿದೆ. 15,278 ಲೀಟರ್ ಮದ್ಯ, 126 ಲೀಟರ್ ಬಿಯರ್ ಹಾಗೂ 489 ಲೀಟರ್ ಸೇಂದಿಯನ್ನು ವಶಕ್ಕೆ ಪಡೆಯಲಾಗಿದ್ದು, 446 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಸೇವಾ ದರ ಪ್ರಕಟಿಸಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್. ಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು ತಾವು ನೀಡುವ ಸೇವೆಗಳ ದರವನ್ನು ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಅನಾವರಣಗೊಳಿಸಬೇಕು. ಖಾಸಗಿ ಕ್ಲಿನಿಕ್, ಡಯಾಗ್ನೋಸ್ಟಿಕ್ ಕೇಂದ್ರಗಳಲ್ಲಿ ರೋಗಿಗಳಿಂದ ಹೆಚ್ಚು ದರ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ದರದ ನಾಮಫಲಕಗಳನ್ನು ಅನಾವರಣಗೊಳಿಸಬೇಕು ಎಂದು ಸೂಚಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳಿದ್ದರೂ ರೋಗಿಗಳಿಗೆ ಒದಗಿಸದೇ ಖಾಸಗಿ ಲ್ಯಾಬ್ ಮತ್ತು ಆಸ್ಪತ್ರೆಗಳಲ್ಲಿ ಪಡೆಯುವಂತೆ ತಿಳಿಸಲಾಗುತ್ತಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದರು.

ಔಷಧಿಗಳ ಲಭ್ಯತೆಯ ಬಗ್ಗೆ ಮಾಹಿತಿ ಕೇಳಿದಾಗ ಆರೋಗ್ಯಾಧಿಕಾರಿಗಳು ‘ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೇಕಿರುವ ಔಷಧಿಗಳ ಇಂಡೆಂಟ್‌ಗಳನ್ನು ನೇರವಾಗಿ ಆನ್ ಲೈನ್ ಮೂಲಕ ರಾಜ್ಯ ಕೇಂದ್ರಕ್ಕೆ ಸಲ್ಲಿಸಿ ಪಡೆಯಬಹುದು. ಬೇಡಿಕೆಗೆ ಅನುಗುಣವಾಗಿ ನೀಡಲಾಗುತ್ತಿದ್ದು ಔಷಧಿಯ ಕೊರತೆ ಇಲ್ಲ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಖಾಲಿ ಇರುವ ನರ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ಅವಕಾಶವಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ನೇಮಕ ಮಾಡಿಕೊಳ್ಳಿ. ಇದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸಮಸ್ಯೆಗಳನ್ನು ಸ್ವಲ್ಪ ಮಟ್ಟಿಗಾದರೂ ಸುಧಾರಿಸಬಹುದು’ ಎಂದು ಅಧ್ಯಕ್ಷರು ತಿಳಿಸಿದರು.

ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಪಾವತಿ ಸಂಬಂಧಿಸಿದಂತೆ 2015ರ ಏಪ್ರಿಲ್‌ ನಂತರ ಆರ್.ಆರ್. ಮೀಟರ್ ಸಂಖ್ಯೆವಾರು ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಅವರು ತಿಳಿಸಿದರು. ಬೆಸ್ಕಾಂ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಡುವೆ ಸಮನ್ವಯ ದ ಕೊರತೆ ಇದ್ದು, ಇಬ್ಬರು ಚರ್ಚಿಸಿ ಬಿಲ್ ಪಡೆದು ಇರುವ ಅನುದಾನದಲ್ಲಿ ಬಿಲ್ ಪಾವತಿಸಲು ಕ್ರಮ ವಹಿಸಬೇಕು ಎಂದರು.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಸರ್ಕಾರದ ಯೋಜನೆಯಡಿ ಕಡಿಮೆ ತೂಕದ ಐದು ಕೆ.ಜಿ ಗ್ಯಾಸ್ ಸಿಲಿಂಡರ್ ನೀಡುತ್ತಿರುವುದಾಗಿ ತಿಳಿಸಿದರು. ಆಹಾರ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಈ ಬಗ್ಗೆ ದೂರು ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ ‘ಆನೆ ದಾಳಿಯಿಂದ ಬೆಳೆ ನಷ್ಟವಾದ ಫಲಾನುಭವಿಗಳಿಗೆ ಪರಿಹಾರ ಪಾವತಿಗಾಗಿ ₨39 ಲಕ್ಷ ಬಿಡುಗಡೆಯಾಗಿದೆ. ₨17.30 ಲಕ್ಷ ಪರಿಹಾರ ಪಾವತಿ ಮಾಡಲಾಗಿದೆ. ಇನ್ನುಳಿದ ಪರಿಹಾರ ಪಾವತಿಗೆ ಕ್ರಮ ವಹಿಸಲಾಗುತ್ತಿದೆ. ಅರಣ್ಯ ಇಲಾಖೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಯ ಪ್ರಕಾರ ಹೆಚ್ಚುವರಿಯಾಗಿ ₨17.21 ಲಕ್ಷ ಬೇಕಿದ್ದು, ಅನುದಾನ ಬಿಡುಗಡೆಗಾಗಿ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಉಮೇಶ್, ಮುಖ್ಯ ಯೋಜನಾಧಿಕಾರಿ ರಾಜು ಇದ್ದರು.

ಕೆವೈಸಿ ಪ್ರಕ್ರಿಯೆಗೆ ಸರ್ವರ್‌ ತೊಂದರೆ

ಆಹಾರ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿ ‘ಆಹಾರ ಇಲಾಖೆಯಿಂದ ಗುಣಮಟ್ಟದ ಅಕ್ಕಿ ಮತ್ತು ಗೋಧಿಯನ್ನು ಹಾಸ್ಟೆಲ್ ಗಳಿಗೆ ಹಂಚಿಕೆ ಮಾಡಲಾಗುತ್ತಿದ್ದು, ಇದೇ ಆಹಾರ ಧಾನ್ಯಗಳನ್ನು ಬಳಸಲಾಗುತ್ತಿದೆಯೇ ಎಂದು ತಹಶೀಲ್ದಾರ್ ಗಳು ಪರಿಶೀಲಿಸುವಂತೆ ಪತ್ರ ಬರೆಯಲಾಗಿದೆ. ಜಿಲ್ಲೆಯಲ್ಲಿ 3,02,170 ಪಡಿತರ ಚೀಟಿದಾರರಿದ್ದು, ಅದರಲ್ಲಿ 11703 ಅಂತ್ಯೋದಯ ಹಾಗೂ 2,86,497 ಬಿ.ಪಿ.ಎಲ್ ಚೀಟಿದಾರರು ಇದ್ದಾರೆ’ ಎಂದು ಮಾಹಿತಿ ನೀಡಿದರು.

ಕೆವೈಸಿ ಪಡೆಯುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಸರ್ವರ್ ತೊಂದರೆಯಿಂದ ಕೆ.ವೈ.ಸಿ ನೀಡಲು ಕಾರ್ಡುದಾರರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಕೇಂದ್ರ ಕಚೇರಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT