ಮಂಗಳವಾರ, ಮಾರ್ಚ್ 21, 2023
28 °C

ಜಿಲ್ಲೆಯ 1.7 ಲಕ್ಷ ನಿರ್ಮಾಣ ಕಾರ್ಮಿಕರಿಗೆ ತಲಾ ₹ 3 ಸಾವಿರ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ ₹ 3 ಸಾವಿರ ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

‘ಈಗಾಗಲೇ ಜಿಲ್ಲೆಯಲ್ಲಿ 72,065 ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹ 21.61 ಕೋಟಿ ವರ್ಗಾವಣೆ ಮಾಡಲಾಗಿದೆ. ಇವರ ಪೈಕಿ 11,040 ಕಾರ್ಮಿಕರ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಗೆ ಜೋಡಣೆಯಾಗದಿರುವ ಕಾರಣ ₹ 3.31 ಕೋಟಿ ಇನ್ನೂ ಜಮಾ ಆಗಿಲ್ಲ. ಕಾರ್ಮಿಕರು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಆಹಾರ ಕಿಟ್ ವಿತರಣೆ: ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ನೆರವಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 10,850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್‍ನಲ್ಲಿ ಆಹಾರದ ಕಿಟ್ ಒದಗಿಸಲಾಗುವುದು ಎಂದು ತಿಳಿಸಿದರು.

ಆಹಾರದ ಕಿಟ್ ಕಾರ್ಮಿಕರಿಗೆ ವಿತರಿಸಲು ಅನುಕೂಲವಾಗುವಂತೆ 9 ತಂಡಗಳನ್ನು ರಚಿಸಲಾಗಿದ್ದು, 32 ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ವಿತರಣೆ ಕಾರ್ಯ ಕೈಗೊಳ್ಳಲಾಗುವುದು. ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಿಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಕಿಟ್ ವಿತರಣೆ ಮಾಡಲಾಗುವುದು ಎಂದರು.

ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು