ಸೋಮವಾರ, ಮೇ 23, 2022
24 °C
ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ: ಆರೋಪ

ಗಿರೀಶ್ ಹಕ್ರೆ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ ಕಳುಹಿಸಿ ಸಮಾಜದ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತರುತ್ತಿರುವ ಯಡಜಿಗಳಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಹಕ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಕಾರ್ಯಕರ್ತರು ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮಿತಿಯ ಅಧ್ಯಕ್ಷ ಎಂ.ಎಸ್.ಶಶಿಕಾಂತ್, ‘ಏ.8ರಂದು ಗಿರೀಶ್ ಹಕ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆ ಕೆರಳಿಸುವಂತಹ ಸಂದೇಶವನ್ನು ಹರಿಯಬಿಟ್ಟಿದ್ದಾರೆ. ಯಾರನ್ನೋ ಮೆಚ್ಚಿಸಲು ಹೋಗಿ ಅವರು ಶಾಂತಿ ಕದಡಲು ಮುಂದಾಗಿದ್ದಾರೆ. ಪವಿತ್ರ ಕುರಾನ್ ಗ್ರಂಥವನ್ನು ರದ್ದು ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹರಿಯಲು ಬಿಟ್ಟಿರುವ ಗಿರೀಶ್ ಹಕ್ರೆ ವಿರುದ್ಧ ಪೊಲೀಸ್ ಇಲಾಖೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ಪಂಚಾಯಿತಿ ಸದಸ್ಯತ್ವವನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಮಾತನಾಡಿ, ‘ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ದ್ವೇಷವನ್ನು ಹರಡುವ ಕೃತ್ಯದಲ್ಲಿ ಕೆಲವರು ನಿರತರಾಗಿದ್ದಾರೆ. ಮಲೆನಾಡಿನ ಈ ಪ್ರದೇಶ ಶಾಂತಿ, ಸೌಹಾರ್ದತೆಗೆ ಹೆಸರಾಗಿದೆ. ಇಲ್ಲಿಯೂ ಶಾಂತಿ ಕದಡುವ ಪ್ರಯತ್ನ ಮಾಡಿರುವ ಗಿರೀಶ್ ಹಕ್ರೆ ವಿರುದ್ಧ ಕ್ರಮವಾಗಬೇಕು’ ಎಂದು ಒತ್ತಾಯಿಸಿದರು.

ಇತಿಹಾಸ ಸಂಶೋಧಕ ಡಾ.ಕೆಳದಿ ಗುಂಡಾ ಜೋಯಿಸ್, ಶಾಂತಪ್ಪ, ಸೋಮೇಶ್, ಪ್ರಭು ಪ್ರಸಾದ್, ಮಂಜುನಾಥ ಬಳಸಗೋಡು, ಗೋಪಾಲ್, ಶ್ರೀಲಕ್ಷ್ಮಿ, ಮಂಜುಳಾ, ಮೀನಾ, ರಾಘವೇಂದ್ರ, ಸೋಮರಾಜ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು