ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಟ್‌ವರ್ಕ್ ಸಮಸ್ಯೆಗೆ ಸಿಗದ ಪರಿಹಾರ: ಪ್ರತಿಭಟನೆಗೆ ಶಾಸಕ ಹಾಲಪ್ಪ ನಿರ್ಧಾರ

Last Updated 30 ಜೂನ್ 2021, 4:51 IST
ಅಕ್ಷರ ಗಾತ್ರ

ಸಾಗರ: ‘ಮಲೆನಾಡು ಭಾಗದ ಗ್ರಾಮಾಂತರ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಹೀಗಾಗಿ, ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಅದರ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ’ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸ್ಮಾರ್ಟ್ ಕ್ಲಾಸ್, ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಅಭಿಯಾನ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.

‘ಗ್ರಾಮಾಂತರ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿದೆ. ಈ ಬಗ್ಗೆ ಕಳೆದ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೆ. ಬಿಜಿಪಿಯ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. ಆದಾಗ್ಯೂ ಸಮಸ್ಯೆ ಹಾಗೇ ಉಳಿದಿದೆ. ಈ ಕಾರಣ ಸರ್ಕಾರದ ವಿರುದ್ಧ ಪ್ರತಿಭಟನೆಯ ಮಾರ್ಗ ಹಿಡಿಯುವುದು ಅನಿವಾರ್ಯವಾಗಿದೆ’ ಎಂದರು.

‘ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವಾಗ ವಿದ್ಯಾರ್ಥಿಗಳಿಗೆ ಟ್ಯಾಬ್ ಕೊಟ್ಟು ಏನು ಪ್ರಯೋಜನ’ ಎಂದು ಪ್ರಶ್ನಿಸಿದ ಅವರು, ‘ಈ ಸಮಸ್ಯೆಗೆ ಪರಿಹಾರ ಸಿಗುವವರೆಗೂ ವಿರಮಿಸುವುದಿಲ್ಲ’ ಎಂದು ಹೇಳಿದರು.

‘ವಿದ್ಯಾರ್ಥಿಗಳಿಗೆ ಮೊದಲು ಕೋವಿಡ್ ನಿರೋಧಕ ಲಸಿಕೆ ನೀಡಿ ನಂತರ ತಜ್ಞರ ಜೊತೆ ಚರ್ಚಿಸಿ ಕಾಲೇಜು ಆರಂಭಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಉಪನ್ಯಾಸಕರು, ವಿದ್ಯಾರ್ಥಿಗಳು ಲಸಿಕೆ ಪಡೆಯುವ ಜೊತೆಗೆ ಲಸಿಕೆಯ ಮಹತ್ವದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಅವರು ಮನವಿ ಮಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಕರುಣಾಕರ ಬಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚೇತನ್ ರಾಜ್ ಕಣ್ಣೂರು, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ತುಕಾರಾಂ, ಸದಸ್ಯ ಟಿ.ಡಿ.ಮೇಘರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್. ಮೋಹನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT