ಶುಕ್ರವಾರ, ಆಗಸ್ಟ್ 19, 2022
27 °C
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸುಂದರೇಶ್

ಜನ ವಿರೋಧಿ ಕಾಯ್ದೆ: ಬಿಜೆಪಿಗೆ ಮಾರಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ‘ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಹಲವು ಜನ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿರುವುದು ಬರಲಿರುವ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಲಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ‘ಹಸಿರು ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರಿಗೆ ದ್ರೋಹ ಬಗೆದಿದ್ದಾರೆ. ಇದನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತಲುಪಿಸಲಿದ್ದಾರೆ’ ಎಂದರು.

‘ನೋಟು ಅಮಾನ್ಯೀಕರಣ ಸೇರಿ ಹಲವು ಎಡವಟ್ಟುಗಳನ್ನು ಕೇಂದ್ರ ಸರ್ಕಾರ ಮಾಡುತ್ತಲೇ ಬಂದಿದೆ. ಕೊರೊನಾ ಹೆಸರಿನಲ್ಲಿ ರಾಜ್ಯದಲ್ಲಿ ಬಿಜೆಪಿಯಿಂದ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಪಂಚಾಯಿತಿ ಚುನಾವಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ವೈಫಲ್ಯವನ್ನು ಜನರಿಗೆ ತಿಳಿಸಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ‘ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಒಂದೇ ಒಂದು ಬಗರ್ ಹುಕುಂ, ಆಶ್ರಯ ಹಕ್ಕುಪತ್ರ ವಿತರಿಸುವಲ್ಲಿ ಆಡಳಿತ ಸೋತಿದೆ. ಎರಡು ವರ್ಷಗಳ ಹಿಂದೆ ನಿರ್ಮಿಸಿದ ಮನೆಗಳಿಗೆ ಇನ್ನೂ ಹಣ ಬಿಡುಗಡೆಯಾಗಿಲ್ಲ. ಯಾವ ಮುಖ ಇಟ್ಟುಕೊಂಡು ಬಿಜೆಪಿ ಮುಖಂಡರು ಜನರ ಬಳಿಗೆ ಹೋಗುತ್ತಾರೆ’ ಎಂದರು.

‘ವಸತಿ ಯೋಜನೆಯಡಿ ಪ್ರತಿ ಪಂಚಾಯಿತಿಗೆ 20 ಮನೆಗಳನ್ನು ವಿತರಿಸುವ ಅಧಿಕಾರವನ್ನು ಶಾಸಕರಿಗೆ ನೀಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂಬ ಕನಿಷ್ಠ ಜ್ಞಾನ ಸಚಿವರಿಗೆ ಇಲ್ಲ’ ಎಂದು ಟೀಕಿಸಿದರು. ಪ್ರಮುಖರಾದ ಬಿ.ಆರ್. ಜಯಂತ್, ಅನಿತಾಕುಮಾರಿ, ಕಲಗೋಡು ರತ್ನಾಕರ್, ಮಲ್ಲಿಕಾರ್ಜುನ ಹಕ್ರೆ, ಎಲ್.ಟಿ. ತಿಮ್ಮಪ್ಪ, ತುಕಾರಾಂ ಶಿರವಾಳ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.