ಭಾನುವಾರ, ಜೂನ್ 20, 2021
28 °C

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‌ನಲ್ಲೇ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಡಾ. ನಾಗರಾಜ್ ಎಲ್. ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆತರಲು ತಜ್ಞರನ್ನೊಳಗೊಂಡ ತಂಡವನ್ನು ಸಿದ್ಧಪಡಿಸಲಾಗಿದೆ. ಇಲ್ಲಿನ ಆಸ್ಪತ್ರೆಗೆ ಕರೆತಂದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಮಾತ್ರ ಶಿವಮೊಗ್ಗಕ್ಕೆ ಕಳುಹಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

150 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ಇಲ್ಲಿಯದಾಗಿದ್ದು, ಸದ್ಯಕ್ಕೆ 100 ಹಾಸಿಗೆಗಳಿಗೆ ಕೇಂದ್ರವನ್ನು ಸೀಮಿತಗೊಳಿಸಲಾಗಿದೆ. ಇಲ್ಲಿನ ರೋಗಿಗಳಿಗೆ ಕೃತಕ ಉಸಿರಾಟ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಪ್ರಕಾರ ಆಹಾರ ನೀಡಲಾಗುತ್ತದೆ. ರೋಗಿಗಳಿಗೆ ಅಗತ್ಯವಿರುವ ಔಷಧಗಳ ಸಂಗ್ರಹ ಇದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್. ಮೋಹನ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಕಾಶ್ ಬೋಸ್ಲೆ ಕೇಂದ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾದವರು ಹಾಗೂ ಅಲ್ಲಿಗೆ ಬರುವವರ ಮೇಲೆ ನಿಗಾ ಇರಿಸಲು ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಕೇಂದ್ರದ ಸಮೀಪ ಹಗಲು ಹಾಗೂ ರಾತ್ರಿ ವೇಳೆ ಪೊಲೀಸರ ಕಾವಲು ಇರುತ್ತದೆ ಎಂದರು.

ಸೋಂಕು ತಗುಲಿದವರು 60 ವರ್ಷಕ್ಕಿಂತ ಕೆಳಗಿನವರಾಗಿದ್ದು, ಮನೆಯಲ್ಲೇ ಪ್ರತ್ಯೇಕ ಶೌಚಾಲಯವಿರುವ ಕೊಠಡಿ ಇದ್ದರೆ ಅಲ್ಲಿಯೇ ಚಿಕಿತ್ಸೆ ಪಡೆಯಲು ಅವಕಾಶವಿದೆ. ಪ್ರತಿದಿನ ವೈದ್ಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡುತ್ತಿರಬೇಕು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.