ಪ್ರಜಾಪ್ರಭುತ್ವದ ಅರಿವು ಮುಖ್ಯ ತಹಶೀಲ್ದಾರ್ ಅಮೃತ್ ಅತ್ರೇಶ್ ಹೇಳಿಕೆ

ತೀರ್ಥಹಳ್ಳಿ: ವಿದ್ಯಾರ್ಥಿ ಜೀವನದಿಂದಲೇ ಪ್ರಜಾಪ್ರಭುತ್ವ ಮಹತ್ವ ತಿಳಿದುಕೊಳ್ಳಬೇಕು ಎಂದು ತಹಶೀಲ್ದಾರ್ ಅಮೃತ್ ಅತ್ರೇಶ್ ಹೇಳಿದರು.
ಪಟ್ಟಣದ ಡಾ.ಯು.ಆರ್.ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1857ರಲ್ಲಿ ಆರಂಭವಾದ ಸ್ವಾತಂತ್ರ್ಯ ಸಂಗ್ರಾಮ ಕೆಲವು ಒಪ್ಪಂದಗಳಿಗೆ ಮಾತ್ರ ಸೀಮಿತವಾಗಿತ್ತು. 1930ರ ಜನವರಿ 26ರಂದು ಪೂರ್ಣ ಸ್ವರಾಜ್ ಘೋಷಣೆ ಮೊಳಗಿಸುವ ಮೂಲಕ ಭಾರತದ ಸ್ವಾತಂತ್ರ್ಯಕ್ಕೆ ಮುನ್ನಡಿ ಬರೆಯಲಾಗಿತ್ತು. ಈ ಕಾರಣ ಜನವರಿ 26ರಂದು ಸಂವಿಧಾನ ಅಂಗೀಕರಿಸಲಾಗಿದೆ. ಭಾರತ ಸದೃಢ, ಶಕ್ತಿಯುತ ರಾಷ್ಟ್ರವಾಗಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಸಲಹೆ ನೀಡಿದರು.
ಧ್ವಜಾರೋಹಣದ ನಂತರ ತಹಶೀಲ್ದಾರ್ ಗೃಹರಕ್ಷಕ, ಪೊಲೀಸ್, ಎನ್‌ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾ ದಳ, ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶೀಲ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ, ಮುಖ್ಯಾಧಿಕಾರಿ ಕುರಿಯಕೋಸ್, ಡಿವೈಎಸ್ಪಿ ಗಜಾನನ ವಾಮನ ಸುತಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಅನಂದ ಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಶೈಲಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.