ಭದ್ರಾವತಿ: ಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈಚೆಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ಮುಖಂಡರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
‘ಕಟ್ಟಡ ನಿರ್ಮಾಣ ಮಾಡುವ ಕೂಲಿ ಕೆಲಸಗಾರರ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಸರ್ಕಾರ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನದ ಮೊತ್ತವನ್ನು 80ರಷ್ಟು ಕಡಿತ ಮಾಡಿದ್ದಲ್ಲದೆ ಎರಡು ವರ್ಷಗಳಿಂದ ಸಹಾಯಧನ ನೀಡದೆ ಸ್ಥಗಿತಗೊಳಿಸಿದೆ. ಇದರಿಂದ ಮಕ್ಕಳ ಭವಿಷ್ಯಕ್ಕೆ ತೊಂದರೆ ನೀಡಿದಂತಾಗಿದೆ. ಕೂಡಲೇ ಸಹಾಯಧನ ಕಡಿತಗೊಳಿಸಿದ್ದನ್ನು ರದ್ದುಗೊಳಿಸಿ, ಹಿಂದೆ ನೀಡುತ್ತಿದ್ದ ಸಹಾಯಧನ ನೀಡಬೇಕು’ ಎಂದು ಒತ್ತಾಯಿಸಿದರು.
‘ಕಟ್ಟಡ ಕಾರ್ಮಿಕರ ಕುಟುಂಬ ಸದಸ್ಯರ ಆರೋಗ್ಯ ಕಾಪಾಡಿಕೊಳ್ಳಲು ಇಎಸ್ಐ ಜಾರಿ ಮಾಡಬೇಕು. ಕಾರ್ಮಿಕ ಇಲಾಖೆ ನೋಂದಣಿ ಮತ್ತು ಮರು ನೋಂದಣಿಗೆ ನೀಡಿರುವ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸದೆ, ನೈಜ ಕಾರ್ಮಿಕರಿಗೆ ಸದಸ್ಯತ್ವದ ಕಾರ್ಡ್‌ಗಳನ್ನು ನೀಡಬೇಕು. ಕಟ್ಟಡ ನಿರ್ಮಾಣ ಮಾಡಲು ಬಾರದ ನಕಲಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ನೀಡಿರುವ ಸದಸ್ಯತ್ವ ಕಾರ್ಡ್‌ಗಳನ್ನು ರದ್ದುಪಡಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಇಲಾಖೆಯೂ ಅಂತಹ ಸಂಘಟನೆಗಳಿಂದ ದೂರವಿರಬೇಕು. ನಿಜವಾದ ಬಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು. ನೈಜ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ವಿಳಂಬ ಮಾಡದೆ ಪರಿಶೀಲಿಸಿ ಪುರಸ್ಕರಿಸಬೇಕು. ಎಲ್ಲ ಕಾರ್ಮಿಕ ಮಕ್ಕಳಿಗೆ ಲ್ಯಾಪ್‌ಟ್ಯಾಪ್‌ಗಳನ್ನು ನೀಡಬೇಕು. ಪಿಂಚಣಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ತಾಂತ್ರಿಕ ತೊಂದರೆಗಳನ್ನು ನಿವಾರಿಸಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.
ಒಕ್ಕೂಟದ ಅಧ್ಯಕ್ಷ ಆರ್.ರಾಧಾಕೃಷ್ಣ ತಹಶೀಲ್ದಾರ್ ಕೆ.ಆರ್. ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಎಸ್. ಅರುಣ ರಾಜ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಮಂಜುನಾಥ್, ಸೀನಣ್ಣ, ಸಂಪತ್, ಅಶೋಕ್, ವೆಂಕಟೇಶ್, ಮಣಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.