ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕಾರಿಪುರ: ಕುಡಿಯುವ ನೀರಿನ ಕುರಿತು ಎಚ್ಚರ ವಹಿಸಿ

ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಸೂಚನೆ
Last Updated 26 ಮಾರ್ಚ್ 2023, 7:53 IST
ಅಕ್ಷರ ಗಾತ್ರ

ಶಿಕಾರಿಪುರ: ಗ್ರಾಮೀಣ ಭಾಗದ ಜನರಿಗೆ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಸರಬರಾಜು ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರ ಜತೆ ನಡೆದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಬಿಸಿಲು ಹೆಚ್ಚಾಗಿದ್ದು, ಕುಡಿಯುವ ನೀರಿನ ಕೊರತೆಯಾಗುವ ಸಾಧ್ಯತೆ ಇದೆ. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಯಿಸುವ ಮೂಲಕ ನೀರು ನೀಡಬೇಕು. ಗ್ರಾಮೀಣ ಭಾಗಗಳಲ್ಲಿ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಕೊಳವೆಬಾವಿ ಕೊರೆಯಿಸಿ ತಿಂಗಳುಗಳೇ ಕಳೆದರೂ ಕುಡಿಯುವ ನೀರಿನ ಸಂಪರ್ಕ ನೀಡುತ್ತಿಲ್ಲ ಎಂಬ ಬಗ್ಗೆ ದೂರುಗಳು ಬಂದಿದ್ದು, ನೀರು ನೀಡಲು ಮುಂದಾಗಬೇಕು. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೆಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಂಸದರ ಗಮನ ಸೆಳೆದರು. ಮೆಸ್ಕಾಂ ಇಲಾಖೆ ಕೊಳವೆಬಾವಿ ನೀರು ನೀಡಲು ವಿದ್ಯುತ್ ಸಂಪರ್ಕ ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಸ್ತುತ ಕೊಳವೆಬಾವಿ ಕೊರೆದಿರುವ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಧರ್ ಅವರಿಗೆ ಸಂಸದ ರಾಘವೇಂದ್ರ ಸೂಚಿಸಿದರು.

‘ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು. ನೀವು ನಿರ್ಲಕ್ಷ್ಯ ತೋರಿದರೆ ನಮಗೆ ಕೆಟ್ಟ ಹೆಸರು ಬರುತ್ತದೆ. ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ಬಾರದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು’ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಸೂಚಿಸಿದರು.

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಚ್. ನಾಗೇಶಪ್ಪ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT