ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಹೆಚ್ಚಳ ವಿಷಯವೇ ಕಾಂಗ್ರೆಸ್ ಬಂಡವಾಳ: ಮೇಘರಾಜ್ ಆರೋಪ

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
Last Updated 3 ಆಗಸ್ಟ್ 2021, 14:29 IST
ಅಕ್ಷರ ಗಾತ್ರ

ಶಿವಮೊಗ್ಗ: ಪೆಟ್ರೋಲ್‌, ಡೀಸೆಲ್ ಬೆಲೆ ಹೆಚ್ಚಳವನ್ನೇ ಇಟ್ಟುಕೊಂಡು ಕಾಂಗ್ರೆಸ್‌ ನಾಯಕರು ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಆರೋಪಿಸಿದರು.

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಣಿ ಉದ್ಘಾಟಿಸಿ ಅವರು ಮಾತನಾಡಿದರು.

ತೈಲ ಬೆಲೆ ಹೆಚ್ಚಳಕ್ಕೆ ಕಾಂಗ್ರೆಸ್ ಸರ್ಕಾರ ಅಂದು ಮಾಡಿದ ಸಾಲವೇ ಕಾರಣ.ಕಾಂಗ್ರೆಸ್ ನಾಯಕರಿಗೆ ಪ್ರತಿಭಟನೆ ಮಾಡಲು ಯಾವುದೆ ವಿಷಯಗಳಿಲ್ಲ. ಕಾಂಗ್ರೆಸ್ ಸರ್ಕಾರ ಅಂದು ಬೇಕಾಬಿಟ್ಟಿ ಮಾಡಿರುವ ಸಾಲ ತೀರಿಸಲು, ಭಾರತವನ್ನು ಸ್ವಾವಲಂಬಿ ದೇಶವಾಗಿಸಲು ಮೋದಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತೈಲ ಬೆಲೆ ಕಡಿಮೆಯಾಗಬಹುದು. ಬದಲಾದ ಸನ್ನಿವೇಶದಲ್ಲಿ ಭಾರತ ಇಂಧನ ಸ್ವಾವಲಂಬನೆ ಸಾಧಿಸಲಿದೆ ಎಂದು ಭವಿಷ್ಯ ನುಡಿದರು.

ಕೇಂದ್ರ, ರಾಜ್ಯ ಯೋಜನೆಗಳು, ಜನಪರ ಕಾರ್ಯಕ್ರಮಗಳ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ನೀಡುವ ಮೂಲಕ ಸಂಘಟನೆ ಮತ್ತಷ್ಟು ಬಲಪಡಿಸಲು ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕೊರೊನಾ ಸಂಕಷ್ಟದ ಸಯದಲ್ಲೂ ಪಕ್ಷದ ಮಹಿಳಾ ತಂಡ ಸಮರ್ಥವಾಗಿ ಕಾರ್ಯನಿರ್ವಹಿಸಿದೆ. ಜಿಲ್ಲೆಯಲ್ಲಿ ಸಂಘಟನೆ ಬಲವಾಗಿದೆ. ಎಲ್ಲರೂ ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಆನ್‌ಲೈನ್ ಮೂಲಕ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಬೇಟಿ ಪಡಾವೋ ಬೇಟಿ ಬಚಾವೋ ಕಾರ್ಯಕ್ರಮ ಸಮರ್ಥವಾಗಿ ಅನುಷ್ಠಾನಗೊಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಗೊಂದಲವಿದೆ. ಲೀಡ್ ಬ್ಯಾಂಕ್ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಕೋರಿದರು.

ಯಡಿಯೂರಪ್ಪ ಹಾಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಪ್ರಮುಖ ಯೋಜನೆಗಳು, ಕೇಂದ್ರದಲ್ಲಿ ಮೋದಿಯವರು ಜಾರಿಗೊಳಿಸಿದ 370ನೇ ವಿಧಿರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ಕೃಷಿ ಮಸೂದೆಗಳ ತಿದ್ದುಪಡಿ ಪಕ್ಷದ ವರ್ಚಸ್ಸು ಹೆಚ್ಚಿಸಿದೆ. ಇಂತಹ ಅಂಶಗಳನ್ನು ಆಂದೋಲನದ ಮಾದರಿಯಲ್ಲಿ ಜನರಿಗೆ ತಿಳಿಸುವ ಕೆಲಸ ಆಗಬೇಕಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತರು ಕೊರೊನಾ ನಿಯಂತ್ರಣಕ್ಕೆ ಕೈ ಜೋಡಿಸಿದ್ದಾರೆ. ಮನೆಮನೆಗೆ ಮಾಸ್ಕ್ ನೀಡಲಾಗಿದೆ. ಕೋವಿಡ್‌ ಪೀಡಿತರ ಮನೆಗಳಿಗೆ ತೆರಳಿ ಸಂತ್ವನ ಹೇಳಲಾಗಿದೆ ಎಂದರು.

ಶಾಮ್‌ಪ್ರಸಾದ್ ಮುಖರ್ಜಿ ಅವರ ನೆನಪಿನಲ್ಲಿ ನಗರದಲ್ಲಿ ಹಸರೀಕರಣ ಕಾರ್ಯ ಕೈಗೊಳ್ಳಲಾಗಿತ್ತು. ಸುಮಾರು 1,170 ಸಸಿಗಳನ್ನು ವಿವಿಧ ಪಾರ್ಕ್‌ಗಳಲ್ಲಿ ನೆಟ್ಟು, ಪೋಷಿಸಲಾಗುತ್ತಿದೆ. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಮಹಿಳಾ ಕಾರ್ಯಕರ್ತರ ಪರಿಶ್ರಮ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮಿನಿರಾವ್, ಮೇಯರ್ ಸುನಿತಾ ಅಣ್ಣಪ್ಪ, ಮುಖಂಡರಾದ ರೇಣುಕಾ ನಾಗರಾಜ್, ಪ್ರಮೀಳಾ, ಸುಧಾಮಣಿ ಬೋರಯ್ಯ, ಶರಾವತಿ ಸಿ. ರಾವ್, ಶೋಭಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT