ಗುರುವಾರ , ಅಕ್ಟೋಬರ್ 22, 2020
21 °C
ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ ಬಣ್ಣನೆ

ದೇಶದಲ್ಲಿ ಹೊಸ ಅಲೆ ಸೃಷ್ಟಿಸಿದ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್ ಸಂಕಷ್ಟದ ಸಮಯದಲ್ಲೂ ಬಿಜೆಪಿ ಸಾಮಾಜಿಕ ಬದ್ಧತೆ ಪ್ರದರ್ಶಿಸಿದೆ. ತನ್ನ ಜವಾಬ್ದಾರಿ ಹೆಚ್ಚಿಸಿಕೊಂಡಿದೆ. ಇಡೀ ದೇಶದಲ್ಲಿ ಹೊಸ ಅಲೆ ಸೃಷ್ಟಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಬಣ್ಣಿಸಿದರು.

ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಅಪ್ಪ ಹಾಕಿದ ಆಲದ ಮರಕ್ಕೆ ನೇಣುಹಾಕಿಕೊಳ್ಳುವ ತಪ್ಪನ್ನು ಪಕ್ಷದ ಮುಖಂಡರು ಮಾಡಲಿಲ್ಲ. ಇಡೀ ದೇಶದಲ್ಲಿ ಅಭಿವೃದ್ಧಿಯ ಅಲೆ ಇದೆ. ಕೋವಿಡ್‌ ಸಂಕಷ್ಟದಲ್ಲೂ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಿದೆ. ಗ್ರಾಮ ಪಂಚಾಯಿತಿ ಸೇರಿದಂತೆ  ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತಿದೆ. ಪಕ್ಷಕ್ಕೆ ಈಗ ಚಿನ್ನದ ಸಮಯ ಎಂದರು.

ಕೇಂದ್ರ, ರಾಜ್ಯ ಸರ್ಕಾರಗಳ ನೆರವಿನಿಂದ ಶಿವಮೊಗ್ಗ ಜಿಲ್ಲೆಯಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರೈಲ್ವೆ, ವಿಮಾನ, ಪ್ರವಾಸೋದ್ಯಮ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಸಾಮಾಜಿಕ ಬದ್ಧತೆ, ಪರಿಸರ ಪ್ರಜ್ಞೆ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ಜಿಲ್ಲೆ ಅಸ್ತಿತ್ವ ಮೆರೆದಿದೆ. ಸುಮಾರು 5 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಲಾಗುತ್ತದೆ. 100 ಎಕರೆ ಜಾಗದಲ್ಲಿ ಸ್ಪೇಸ್ ‌ಪಾರ್ಕ್ ನಿರ್ಮಾಣಗೊಂಡಿದೆ. ನೀರಾವರಿ ಯೋಜನೆಗಳು ಸಾಕಾರಗೊಳ್ಳಲಿವೆ. ಶೀಘ್ರ ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಜೋಗದ ಮತ್ತೆ ವೈಭವ ಮತ್ತೆ ಮರುಕಳಿಸಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಜಿಲ್ಲೆಯ ಹಲವರಿಗೆ ನಿಗಮ, ಮಂಡಳಿಗಳಲ್ಲಿ ಅವಕಾಶ ನೀಡಲಾಗಿದೆ. ಜಿಲ್ಲೆ ಸಂಪೂರ್ಣ ಕಾಂಗ್ರೆಸ್ ಮುಕ್ತವಾಗುವತ್ತ ಸಾಗಿದೆ. ರಾಜ್ಯದಲ್ಲಿ ವಿರೋಧ ಪಕ್ಷಗಳು ಅಧಿಕಾರವಿಲ್ಲದೇ ಹಪಾಹಪಿತನ ಪ್ರದರ್ಶನ ಮಾಡುತ್ತಿವೆ. ಹೊಸ ಕಾಯ್ದೆಗಳ ಕುರಿತು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಮಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ನಿರ್ವಹಣಾ ಕೇಂದ್ರ ಉದ್ಘಾಟಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕ ಕುಮಾರ್ ಬಂಗಾರಪ್ಪ, ಆರ್ಯ ವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮಲೆನಾಡು ಅಭಿವೃದ್ಧಿ,ನಿಗಮ ಮಂಡಳಿಯ ಅಧ್ಯಕ್ಷ ರಾದ ಗುರುಮೂರ್ತಿ, ‘ಸೂಡಾ’ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ.ಸಿದ್ದರಾಮಣ್ಣ, ಮುಖಂಡರಾದ ಎಸ್.ದತ್ತಾತ್ರಿ, ನಟರಾಜ್, ಗಿರೀಶ್ ಪಟೇಲ್, ಮಧುಸೂದನ್‌, ಜಗದೀಶ್, ಜ್ಞಾನೇಶ್ವರ್, ಚನ್ನಬಸಪ್ಪ, ಪದ್ಮಿನಿ, ಶಿವರಾಜ್, ಧರ್ಮ ಪ್ರಸಾದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.