ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಕರೆತನ್ನಿ: ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ
Last Updated 5 ನವೆಂಬರ್ 2020, 3:52 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಶಾಲೆ ಬಿಟ್ಟಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಮತ್ತೆ ಶಾಲೆಗೆ ಕರೆ ತರಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಯಾವೊಬ್ಬ ಮಗುವೂ ಶಾಲೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲೆಗಳಿಗೆ ನಾನಾ ಸವಲತ್ತು ನೀಡುತ್ತಿದೆ. ಆದರೂ ಜಿಲ್ಲೆಯಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿರುವ ಮಾಹಿತಿ ಇದೆ. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರನ್ನು ಮತ್ತೆ ಶಾಲೆಗೆ ಕರೆತರುವ ಪ್ರಯತ್ನ ಶಿಕ್ಷಣ ಅಧಿಕಾರಿಗಳಿಂದ ಆಗಬೇಕು ಎಂದು ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ ಪ್ರಸ್ತುತ ಅಲ್ಪಸಂಖ್ಯಾತ ಸಮುದಾಯದ 22 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ. ಇವರ ಪೈಕಿ 9 ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಲಾಗಿದ್ದು, ಇನ್ನುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 2ನೇ ತರಗತಿಯಿಂದ 10ನೇ ತರಗತಿವರೆಗೆ ಒಟ್ಟು 44,994 ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಒಟ್ಟು 219 ಉರ್ದು ಶಾಲೆಗಳಿದ್ದು, 44,933 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. 610 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಿಂಗಳಲ್ಲಿ 25 ದಿನ ಮಧ್ಯಾಹ್ನದ ಪೌಷ್ಟಿಕ ಆಹಾರ, ಮೊಟ್ಟೆ ಹಾಲು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 2052 ಗರ್ಭಿಣಿಯರು ಮತ್ತು 1904 ಬಾಣಂತಿಯರು ಮತ್ತು 5 ಮಂದಿ ಕಿಶೋರಿಯರು, 6 ವರ್ಷದೊಳಗಿನ 19,311 ಮಕ್ಕಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರದಿಂದ ಮೌಲಾನಾ ಆಜಾದ್ ಫೌಂಡೇಶನ್ ವತಿಯಿಂದ 9ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 8ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ₹ 5 ಸಾವಿರ ಮತ್ತು 11-12ನೇ ತರಗತಿ ವಿದ್ಯಾರ್ಥಿನಿಯರಿಗೆ ₹ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಯೋಜನೆಯಡಿ ಗ್ರಾಂಟ್ ಇನ್ ಏಯ್ಡ್, ‘ಸೀಖೋ ಔರ್ ಕಮಾವೊ’ ಯೋಜನೆಯಡಿ ವೃತ್ತಿ ಕೌಶಲ ತರಬೇತಿ ನೀಡಲಾಗುತ್ತಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಧರ್ಮಪ್ಪ ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ, ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT