ಭಾನುವಾರ, ಮೇ 22, 2022
24 °C
ಸಚಿವರ ಮನೆಗೆ ಮುತ್ತಿಗೆ ಯತ್ನ, ಲಘು ಲಾಠಿ ಪ್ರಹಾರ, ಹಲವರ ಬಂಧನ, ಬಿಡುಗಡೆ

ಈಶ್ವರಪ್ಪ ವಿರುದ್ಧ ಗುಡುಗಿದ ಕಾಂಗ್ರೆಸ್‌ ಕಾರ್ಯಕರ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಭಾರಿ ಪ್ರತಿಭಟನೆ ನಡೆಸಿದರು.

ಈಶ್ವರಪ್ಪ ಅವರು ಗುತ್ತಿಗೆ ಬಿಲ್ ಪಾವತಿಗೆ ಶೇ 40ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣಪೂರ್ವ ಪತ್ರದಲ್ಲೂ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಬರೆದಿದ್ದಾರೆ. ಕೂಡಲೇ ಈಶ್ವರಪ್ಪ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಿಸಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಕೆಲವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

‘ಉಡುಪಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಿಜೆಪಿ ಮುಖಂಡ. ಇತ್ತೀಚೆಗೆ ಸಚಿವ ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಕೇಳಿದ್ದ ಆರೋಪ ಮಾಡಿದ್ದರು. ಈ ಕುರಿತು ಸಾಕಷ್ಟು ಚರ್ಚೆಯೂ ನಡೆದಿತ್ತು. 15 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಅವರ ಮೊಬೈಲ್‌ ಕರೆಯ ಜಾಡು ಹಿಡಿದ ಪೊಲೀಸರು ಉಡುಪಿಯ ಖಾಸಗಿ ವಸತಿ ಗೃಹದಲ್ಲಿ ತಪಾಸಣೆ ನಡೆಸಿದಾಗ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಮುನ್ನ ಕಳಿಸಿದ ಸಂದೇಶದಲ್ಲಿ ನನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಪತ್ನಿ, ಮಕ್ಕಳಿಗೆ ನೆರವಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಇಂತಹ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಕಾಮಗಾರಿ ಬಿಲ್ ಕೊಡಿಸುವಂತೆ ಪ್ರಧಾನ ಮೋದಿ ಅವರಿಗೆ ಗುತ್ತಿಗೆದಾರ ಸಂತೋಷ್ ಈಚೆಗೆ ಪತ್ರ ಬರೆದಿದ್ದರು. ಕಾಮಗಾರಿ ಮುಗಿಸಿ ವರ್ಷ ಮುಗಿದರೂ ಹಣ ಪಾವತಿಸದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದರು. ಹಣ ಬಿಡುಗಡೆ ಮಾಡಲು ಸಚಿವ ಈಶ್ವರಪ್ಪ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದರು. ಈ ಕುರಿತು ಸೂಕ್ತ ತನಿಖೆ ನಡೆಸಬೇಕು. ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಎಚ್‌.ಪಿ. ಗಿರೀಶ್, ಮುಖಂಡರಾದ ಎಂ.ಪ್ರವೀಣ್‌ ಕುಮಾರ್, ಕೆ.ದೇವೇಂದ್ರಪ್ಪ, ಕೆ. ರಂಗನಾಥ್, ಕುಮರೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ:

ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಚಿವ ಈಶ್ವರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಸಿ.ಎಸ್. ಚಂದ್ರಭೂಪಾಲ್, ಸೌಗಂಧಿಕಾ ರಘುನಾಥ್‌, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಚಂದನ್, ರಾಮೇಗೌಡ, ಬಿ.ಎ. ರಮೇಶ್ ಹೆಗ್ಡೆ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು