ಶನಿವಾರ, ಜುಲೈ 24, 2021
28 °C
ಸಚಿವ ದ್ವಯರ ರಾಜೀನಾಮೆಗೆ

ಕೋವಿಡ್‌ ಸಲಕರಣೆ ಖರೀದಿಯಲ್ಲಿ ಅವ್ಯವಹಾರ: ಶಿವಮೊಗ್ಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್‌ ಸಲಕರಣೆಗಳ ಖರೀದಿಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ. ಹಗರಣದಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್‌, ಆರೋಗ್ಯ ಸಚಿವ ಶ್ರೀರಾಮುಲ್ ಅವರ ಕೈವಾಡವಿದೆ. ತಕ್ಷಣ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಗ್ರಹಿಸಿದರು.

ಕೋವಿಡ್ ಉಪಕರಣಗಳ ಖರೀದಿಯಲ್ಲಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ದಾಖಲೆಗಳ ಸಮೇತ ಬಹಿರಂಗ ಪಡಿಸಿದ್ದಾರೆ. ಈ ಕುರಿತು ಉನ್ನತಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇದೇ ಮೊದಲ ಬಾರಿ ಆ್ಯಪ್‌ ಮೂಲಕ ನಡೆದ ವೀಡಿಯೊ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಕೋವಿಡ್-19 ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ. ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಸಮರ್ಪಕ ಕೋವಿಡ್‌ ಉಪಕರಣಗಳು ಇಲ್ಲವಾಗಿವೆ. ಇಡೀ ರಾಜ್ಯದಲ್ಲಿ ಎಲ್ಲಿಯೂ ಉತ್ತಮ ಲ್ಯಾಬ್‌ಗಳು ಇಲ್ಲ. ಪಿಪಿಇ ಕಿಟ್ ಇತರ ಸೌಲಭ್ಯಗಳ ಕೊತರೆ ಇದೆ. ಪ್ರಕರಣಗಳ ಸಂಖ್ಯೆ ನಿತ್ಯವೂ ಹೆಚ್ಚುತ್ತಲೇ ಇವೆ. ಕೇವಲ ಭಾವನಾತ್ಮಕ ವಿಷಯಗಳಿಂದ ಕೊರೊನಾ ಸೋಂಕು ನಿಯಂತ್ರಿಸಲು ಸಾಧ್ಯವಿಲ್ಲ. ಇಂತಹ ಸಮುಯದಲ್ಲೂ ಸರ್ಕಾರ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನ ಮಂತ್ರಿಗಳ ‘ಪಿಎಂ ಕೇರ್ ನಿಧಿಗೆ’ ಸಾವಿರಾರು ಕೋಟಿ ನೆರವು ಹರಿದುಬರುತ್ತಿದೆ. ಅಷ್ಟೊಂದು ಹಣ ಬಳಸುವಲ್ಲಿ ಕೇಂದ್ರ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಈ ನಿಧಿಯಿಂದ ರಾಜ್ಯಕ್ಕೆ ₨ 10 ಸಾವಿರ ಕೋಟಿ ನೀಡಬೇಕು. ಕೋವಿಡ್‌ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಮತ್ತೆ ಮತ್ತೆ ಬಂಡವಾಳ ಶಾಹಿಗಳ ಜತೆ ಕೈ ಜೋಡಿಸಿ, ಮಾನವೀಯತೆ ಮರೆಯುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ ಕೊರೊನಾ ಪರೀಕ್ಷೆಗೆ ಅವಕಾಶ ನೀಡಿರುವುದು ಆಸ್ಪತ್ರೆಗಳ ದುಬಾರಿ ಶುಲ್ಕ ವಸೂಲಿಗೆ ದಾರಿ ಮಾಡಿಕೊಟ್ಟಿದೆ. ಎಲ್ಲಾ ಕೋವಿಡ್ ಪರೀಕ್ಷೆಗಳನ್ನು ಉಚಿತವಾಗಿ ನಡೆಸಬೇಕು. ಖಾಸಗಿ ಆಸ್ಪತ್ರೆಗಳ ಶುಲ್ಕ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.