ಶನಿವಾರ, ಫೆಬ್ರವರಿ 27, 2021
30 °C
ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ

ಉಚಿತ ಲಸಿಕೆ: ಸಚಿವ ಸಂಪುಟದಲ್ಲಿ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಭಾರತದಲ್ಲಿ ತಯಾರಿಸಿರುವ ಕೊರೊನಾ ಲಸಿಕೆ ಇತರ ದೇಶಗಳಿಂತ ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ದೊರಕುತ್ತಿದೆ. ಉಚಿತವಾಗಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

‘ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದೆ. ಆದರೆ, ನಮ್ಮ ದೇಶದಲ್ಲಿ ತಯಾರಿಸಿರುವ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಿ ಯಶಸ್ವಿಯಾಗಿ ಎದುರಿಸಿದ್ದೇವೆ. ಇದೀಗ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆಯನ್ನು ಸಿದ್ಧಪಡಿಸಿರುವುದು ಹೆಮ್ಮೆಯ ಸಂಗತಿ’ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ‘ಬೇರೆ ದೇಶಗಳ ಮೇಲೆ ಅವಲಂಬಿತಾಗದೇ ನಮ್ಮ ವಿಜ್ಞಾನಿಗಳು ಸ್ವದೇಶಿಯಾಗಿ ಕೊರೊನಾ ಲಸಿಕೆಯನ್ನು ಸಿದ್ಧಪಡಿಸಿರುವುದು ಹೆಮ್ಮೆ ಮೂಡಿಸಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‍ಗಳಿಗೆ ಲಸಿಕೆ ಹಾಕಲಾಗುತ್ತಿದ್ದು, ಸುಮಾರು 3 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ನಮ್ಮ ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳು ಸೇರಿ ಸುಮಾರು 25 ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು’ ಎಂದು ತಿಳಿಸಿದರು.

ಮುಂದಿನ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕುವ ಗುರಿ ಹೊಂದಲಾಗಿದ್ದು, ಕೊರೊನಾ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಲಸಿಕೆ ಬಂದಿದೆ ಎಂದು ನಿರ್ಲಕ್ಷ್ಯ ತೋರದೇ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಬಳಕೆ ಕಡ್ಡಾಯವಾಗಿ ಮುಂದುವರಿಸಬೇಕು ಎಂದು ಅವರು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಶಾಸಕ ಕೆ.ಬಿ. ಅಶೋಕ್‌ ನಾಯ್ಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಮೆಗ್ಗಾನ್ ನಿರ್ದೇಶಕರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ ಶೆಟ್ಟಿ ಅವರೂ ಈ ಸಂದರ್ಭದಲ್ಲಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು