ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಜಿಲ್ಲೆಯ ಪ್ರವಾಸಿ ತಾಣಗಳಿಗೆ ವಾರಾಂತ್ಯ ನಿರ್ಬಂಧ

ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುವ ಪ್ರದೇಶದ ಶಾಲಾ, ಕಾಲೇಜು ಬಂದ್‌
Last Updated 6 ಜನವರಿ 2022, 12:50 IST
ಅಕ್ಷರ ಗಾತ್ರ

ಶಿವಮೊಗ್ಗ: ಶನಿವಾರ, ಭಾನುವಾರ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದ್ದು, ಎರಡೂ ದಿನ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶನಿವಾರ, ಭಾನುವಾರ ವಾರಾಂತ್ಯ ಕರ್ಫ್ಯೂ ಘೋಷಿಸಲಾಗಿದೆ. ಪ್ರವಾಸಿ ತಾಣಗಳಿಗೆ ಪ್ರವೇಶ ಸೇರಿದಂತೆ ಯಾವುದೇ ಚಟುವಟಿಕೆಗಳಿಗೆ ಈ ದಿನಗಳಲ್ಲಿ ಅವಕಾಶ ಇಲ್ಲ. ಅಗತ್ಯ ಸೇವೆಗಳಿಗೆ ಯಾವುದೆ ತೊಂದರೆ ಇಲ್ಲ ಎಂದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ, ಕಾಲೇಜು ನಡೆಸಬೇಕು. ಯಾವುದೇ ಪ್ರದೇಶದಲ್ಲಿ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಆ ಪ್ರದೇಶವನ್ನು ಕ್ಲಸ್ಟರ್ ಎಂದು ಗುರುತಿಸಲಾಗುವುದು. ಅಂತಹ ಕ್ಲಸ್ಟರ್ ವ್ಯಾಪ್ತಿಯ ಶಾಲಾ ,ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಬೇಕು. ಕೋವಿಡ್ ಹರಡುವಿಕೆ ತಡೆಯಲು ವಸತಿ ಶಾಲೆಗಳು, ಆಶ್ರಯ ತಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ಸ್ಯಾಂಪಲ್ ಸಂಗ್ರಹಿಸಬೇಕು. ತಪಾಸಣೆ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯ ಆಡಳಿತದಿಂದ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದರು.

ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಬರುವ ಪ್ರಯಾಣಿಕರ ತಪಾಸಣೆ ಮಾಡಬೇಕು. ಅದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್‌ನಿಲ್ದಾಣ ಹಾಗೂ ಆಗುಂಬೆ ಚೆಕ್‌ಪೋಸ್ಟ್‌ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ, ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು ಅಂಥವರ ಮೇಲೆ ನಿಗಾ ಇರಿಸಬೇಕು ಎಂದರು.

ಕೋವಿಡ್ ನಿಯಂತ್ರಣಕ್ಕೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 150 ಹಾಸಿಗೆ ಸಾಮರ್ಥ್ಯದ ಹಾಸ್ಟೆಲ್ ಅಥವಾ ಸಮುದಾಯ ಭವನಗಳನ್ನು ಗುರುತಿಸಬೇಕು. ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಕೋವಿಡ್‌ ರೋಗಿಗಳಿಗಾಗಿಯೇ ಒಟ್ಟು 1500 ಹಾಸಿಗೆ ಮೀಸಲಿಡಬೇಕು. 15 ವರ್ಷದಿಂದ 18ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸಬೇಕು. ಪ್ರತಿಯೊಬ್ಬರಿಗೂ ತ್ವರಿತವಾಗಿ ಲಸಿಕೆ ನೀಡಬೇಕು. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಲಸಿಕೆ ನೀಡುವ ಕಾರ್ಯಕ್ಕೆ ಯಾವುದೇ ಅಡ್ಡಿ ಇರಬಾರದು ಎಂದು ತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT