ಸೋಮವಾರ, ಜೂನ್ 21, 2021
20 °C
ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಮಾಹಿತಿ

ಶಿವಮೊಗ್ಗದ ಕೋವಿಡ್‌ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿ ನೇಮಕ: ಕೆಎಸ್ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೋವಿಡ್‌ ಆರೈಕೆ ಕೇಂದ್ರಗಳಿಗೆ ಅಗತ್ಯವಿರುವ ‘ಡಿ‘ ಗ್ರೂಪ್, ಶುಶ್ರೂಷಕರು ಹಾಗೂ ವೈದ್ಯ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಮೆಗ್ಗಾನ್‌ ಆಸ್ಪತ್ರೆ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಕ್ಷಣ 25 ವೈದ್ಯರು, 50 ಶುಶ್ರೂಷಕರು, 50 ‘ಡಿ’ ದರ್ಜೆ ನೌಕರರ ನೇಮಕಾತಿಗೆ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗಂಟಲು ದ್ರವ ಪರೀಕ್ಷೆ ಗಣನೀಯವಾಗಿ ಹೆಚ್ಚಿಸಲಾಗಿದೆ. ಹಾಗಾಗಿ, ಸೋಂಕಿತರ ಪ್ರಮಾಣದಲ್ಲೂ ಏರಿಕೆಯಾಗಿದೆ. ತಪಾಸಣಾ ಸಂಖ್ಯೆ ಪ್ರತಿ ದಿನ ಎರಡು ಸಾವಿರ ದಾಟಿದೆ. ಈ ಸೋಂಕು ಗರಿಷ್ಠ ಹಂತ ತಲುಪಿದ ನಂತರ ಇಳಿಕೆಯಾಗುವುದು ಎಂದು ತಜ್ಞರು ವರದಿ ನೀಡಿದ್ದಾರೆ.

ಹೊಸದಾಗಿ ವೈದ್ಯಕೀಯ ಪದವಿ ಪೂರೈಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು. ಶಿವಮೊಗ್ಗದ ವೈದ್ಯಕೀಯ ಕಾಲೇಜಿನಲ್ಲಿ ಸೇವೆ ಸಲ್ಲಿಸಲು ಆಸಕ್ತಿ ತೋರುವ ವೈದ್ಯರಿಗೆ ಅವಕಾಶ ನೀಡಲಾಗುವುದು. ಸ್ಥಳೀಯ ಖಾಸಗಿ ಆಸ್ಪತ್ರೆಗಳ ವೈದ್ಯರ ಸೇವೆಯನ್ನೂ ಬಳಸಿಕೊಳ್ಳಲಾಗುವುದು. ಇಂತಹ ವೈದ್ಯರಿಗೆ ಸಂಭಾವನೆ ನಿಗದಿ ಕುರಿತು ಸಭೆಯಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮತ್ತಿತರ ಪರಿಕರಗಳ ಕೊರತೆ ಇಲ್ಲ. ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲೂ ಸೇವೆ ದೊರೆಯುತ್ತಿದೆ. ಶಿಕಾರಿಪುರ, ಭದ್ರಾವತಿ ಹಾಗೂ ತೀರ್ಥಹಳ್ಳಿಯಲ್ಲಿಯೂ ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲಾಗುವುದು. ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೆಗ್ಗಾನ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿದ್ದಪ್ಪ, ಸಲಹಾ ಸಮಿತಿ ಸದಸ್ಯರಾದ ಡಾ.ವಾಣಿಕೋರಿ, ದಿವಾಕರ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಉಪಸ್ಥಿತರಿದ್ದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು