ಸೋಮವಾರ, ಜನವರಿ 17, 2022
19 °C
ಜಿಲ್ಲೆಯ ವಿವಿಧೆಡೆ ಲಸಿಕಾ ಅಭಿಯಾನ, ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ

ಕೋವಿಡ್‌ ಬೂಸ್ಟರ್‌ ಡೋಸ್‌ ಲಸಿಕೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಕೋವಿಡ್‌ ಲಸಿಕೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.

ಜ.10ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಎಲ್ಲರೂ ಸ್ವಇಚ್ಛೆಯಿಂದ ಬಂದು ಲಸಿಕೆ ಪಡೆದು ಸಹಕರಿಸಬೇಕು ಎಂದು ಈಶ್ವರಪ್ಪ ಕೋರಿದರು.

ಆರ್‌ಸಿಎಚ್‌ಒ ಡಾ.ನಾಗರಾಜ ನಾಯ್ಕ ಮಾತನಾಡಿ, ‘ಈಗಾಗಲೇ ಲಸಿಕೆ ಪಡೆದಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರು ಕೋವಿಡ್ ಪೋರ್ಟಲ್‍ನಲ್ಲಿ ನೋಂದಾಯಿಸಿದಂತೆ 2ನೇ ಡೋಸ್ ಪಡೆದ 39 ವಾರಗಳ ನಂತರ ಬೂಸ್ಟರ್ ಡೋಸ್ ಪಡೆಯಲು ಅರ್ಹರಿರುತ್ತಾರೆ. ಈ ಫಲಾನುಭವಿಗಳು ಈ ಮುಂಚೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್ ಪಡೆದಿದ್ದಲ್ಲಿ ಅದನ್ನೇ ಬೂಸ್ಟರ್ ಡೋಸ್‌ನಲ್ಲೂ ಕಡ್ಡಾಯವಾಗಿ ತೆಗೆದುಕೊಳ್ಳಬೇಕು.  23,124 ಆರೋಗ್ಯ ಕಾರ್ಯಕರ್ತರು, 18,154 ಮುಂಚೂಣಿ ಕಾರ್ಯಕರ್ತರು ಇದ್ದಾರೆ’ ಎಂದು ಮಾಹಿತಿ ನೀಡಿದರು.

ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ಸಚಿವರ ಪತ್ನಿ ಜಯಲಕ್ಷ್ಮಿ ಈಶ್ವರಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.