ಭಾನುವಾರ, ಜುಲೈ 3, 2022
24 °C

ಕೋವಿಡ್ ಮೂರನೇ ಅಲೆ: ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ –ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೋವಿಡ್ ಮೂರನೇ ಅಲೆಯ ಸಮಯದಲ್ಲಿ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಮಕ್ಕಳ ಮೇಲೆ ಕೋವಿಡ್ ಬೀರುವ ಪರಿಣಾಮಗಳ ಕುರಿತು ವಿವಿಧ ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರ ಜತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು. ಮಕ್ಕಳಿಗೆ ಮೂರು ದಿನಗಳಿಂತ ಹೆಚ್ಚು ಜ್ವರ ಕಂಡುಬಂದರೆ ವೈದ್ಯರ ಗಮನಕ್ಕೆ ತರಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ನಿಗಾವಹಿಸಬೇಕು. ಕೊರೊನಾ ಪೀಡಿತ ಪಾಲರೂ ಮಕ್ಕಳ ಆರೋಗ್ಯ ಗಮನಿಸುತ್ತಿರಬೇಕು. ಈ ಕುರಿತು ಪಾಲಕರಿಗೆ, ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು.

ಕೋವಿಡ್ ಅಲೆ ನಿಭಾಯಿಸಲು ಮೆಗ್ಗಾನ್‍ನಲ್ಲಿ ಕನಿಷ್ಠ 50 ಹಾಸಿಗೆಗಳನ್ನು ಮಕ್ಕಳ ಕೋವಿಡ್ ವಾರ್ಡ್ ಹಾಗೂ ಗುರುತರ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಪ್ರತ್ಯೇಕವಾಗಿ 50 ಹಾಸಿಗೆ ವ್ಯವಸ್ಥೆ ಮಾಡಬೇಕು. ಚಿಕಿತ್ಸೆಗೆ ಸಂಬಂಧಿಸಿದ ಯಂತ್ರೋಪಕರಣಗಳು, ಅಗತ್ಯ ಔಷಧಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು. ಮಕ್ಕಳ ಕೋವಿಡ್ ನಿರ್ವಹಣೆ ಕುರಿತು ಸೂಕ್ತ ಕ್ರಿಯಾ ಯೋಜನೆ ಸಲ್ಲಿಸಬೇಕು. ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ 6 ಕೆಎಲ್ ಆಕ್ಸಿಜನ್ ಸಂಗ್ರಹ ಪ್ಲಾಂಟ್‍ಗಳನ್ನು ಸ್ಥಾಪಿಸಲು ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಮಕ್ಕಳಲ್ಲಿ ಕೋವಿಡೋತ್ತರ ಆರೋಗ್ಯದ ತೊಂದರೆ ಎದುರಿಸಲು ಐಸಿಯು ಸೇರಿದಂತೆ ಸಾಕಷ್ಟು ಸಿದ್ಧತೆ ಅಗತ್ಯವಿದೆ. ಕೋವಿಡ್ ಲಕ್ಷಣಗಳಿರುವ ಮಕ್ಕಳ ಕೋವಿಡ್ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕುಮಟ್ಟದಲ್ಲಿ ಅಗತ್ಯ ಪರೀಕ್ಷಾ ಉಪಕರಣಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಹಿರಿಯ ವೈದ್ಯರು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಸಿದ್ದಪ್ಪ, ತಜ್ಞ ವೈದ್ಯರಾದ ಡಾ.ಧನಂಜಯ ಸರ್ಜಿ, ಡಾ.ವಿಕ್ರಂ, ಡಾ.ಶಂಭುಲಿಂಗ, ಡಾ.ಆರ್.ಬಿ.ಪಾಟೀಲ್, ಡಾ.ಶ್ರೀಕಾಂತ್ ಹೆಗಡೆ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು